

ನಂಜನಗೂಡು: ತಾಲೂಕಿನ ಹುಲ್ಲಹಳ್ಳಿ ಹೋಬಳಿ ಕಾರ್ಯ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಮಂಗಳವಾರ ಕೊಂಡೋತ್ಸವ ವಿಜೃಂಭಣೆಯಿಂದ ನೆರವೇರಿತು.
ಗ್ರಾಮದ ಕೂಗಳತೆ ದೂರದಲ್ಲಿರುವ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮುಂಜಾನೆಯಂದಲೇ ವಿಶೇಷ ಪೂಜೆ, ಅಭಿಷೇಕ ನೆರವೇರಿಸಲಾಯಿತು. ಮಧ್ಯಾಹ್ನ 12.30 ಸುಮಾರಿಗೆ ಸಂಗಮ ಮಠದ ಶ್ರೀ ಮಹೇಶ್ವರ ಸ್ವಾಮೀಜಿಗಳು ಕೊಂಡೋತ್ಸವಕ್ಕೆ ಚಾಲನೆ ನೀಡಿದರು. ಹರಕೆ ಹೊತ್ತ ಭಕ್ತರು ಈಡುಗಾಯಿ ಹೊಡೆದು, ಕೊಂಡ ಹಾಯುವ ಮೂಲಕ ಭಕ್ತಿ ಸಮರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಕಾರ್ಯ ಗ್ರಾಮದ ಯಜಮಾನರು, ಮುಖಂಡರು, ಸುತ್ತಲಿನ ಸಾವಿರಾರು ಭಕ್ತರು ಭಾಗವಹಿಸಿದ್ದರು. ಕಾರ್ಯ ಗ್ರಾಮಸ್ಥರಿಂದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.