

ಮೈಸೂರು: ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಖಾತ್ರಿಪಡಿಸಬೇಕು. 4,200ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಸಂಯೋಜನೆಯ ಹೆಸರಿನಲ್ಲಿ ಮುಚ್ಚುವುದನ್ನು ನಿಲ್ಲಿಸಬೇಕೆಂದು ಎಐಡಿಎಸ್‌ಒ ವತಿಯಿಂದ ಶಾಸಕರಾದ ಜಿ.ಟಿ.ದೇವೇಗೌಡ, ಟಿ.ಎಸ್.ಶ್ರೀವತ್ಸ ಅವರಿಗೆ ಮನವಿ ಪತ್ರ ನೀಡಲಾಯಿತು.
ಕಳೆದ ಮೂರು ವರ್ಷಗಳಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಸರಿಯಾಗಿ ವಿದ್ಯಾರ್ಥಿ ವೇತನ ದೊರೆಯುತ್ತಿಲ್ಲ. ಹಿಂದುಳಿದ, ಅಲ್ಪಸಂಖ್ಯಾತ ಇಲಾಖೆ ಅಡಿಯಲ್ಲಿ ಬರುವ ಪದವಿ, ಸ್ನಾತಕೋತ್ತರ ಇಂಜಿನಿಯರಿಂಗ್, ಮೆಡಿಕಲ್ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ದೊರಕುತ್ತಿಲ್ಲ.
ರಾಜ್ಯದ ಹಲವೆಡೆ ಕೆಲವು ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದಿಂದ ವಂಚಿತರಾಗಿದ್ದಾರೆ. ಉನ್ನತ ಶಿಕ್ಷಣದ ವೆಚ್ಚ ಅತ್ಯಂತ ಅಧಿಕವಾಗಿರುವ ಸಂದರ್ಭದಲ್ಲಿ ಕ್ರಮೇಣವಾಗಿ ವಿದ್ಯಾರ್ಥಿ ವೇತನ ಕಡಿತಗೊಳ್ಳುತ್ತಿರುವುದರಿಂದ ಹಲವರು ಉನ್ನತ ಶಿಕ್ಷಣದಿಂದ ದೂರ ಉಳಿಯುವ ಅನಿವಾರ್ಯತೆ ಎದುರಾಗಿದೆ. ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಪರಿಹಾರ ಒದಗಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.
ಸರ್ಕಾರವು ಶಿಕ್ಷಣಕ್ಕೆ ಬಜೆಟ್‌ನಲ್ಲಿ ಅನುದಾನ ನಿಗದಿಪಡಿಸಬೇಕು. ಎಲ್ಲ ವಿಭಾಗದ ಮತ್ತು ಎಲ್ಲ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಖಾತ್ರಿಪಡಿಸಬೇಕು. ಸರ್ಕಾರಿ ಶಾಲೆಗಳನ್ನು ಸಂಯೋಜನೆಗೊಳಿಸುವ ಬದಲು ಹಾಜರಾತಿ ಕಡಿಮೆಯಿರುವ ಶಾಲೆಗೆ ಅವಶ್ಯಕ ಸೌಲಭ್ಯ ನೀಡಿ ರಕ್ಷಿಸಬೇಕು ಎಂದು ಸಂಘಟನೆ ನೀಡಿದ ಮನವಿಯಲ್ಲಿ ಆಗ್ರಹಿಸಲಾಗಿದೆ. ಎಐಡಿಎಸ್‌ಒ ಮುಖಂಡರಾದ ನಿತಿನ್, ಸ್ವಾತಿ, ಹೇಮಾ, ಅಭಿಷೇಕ್ ಇದ್ದರು.