

ಹಾಸನ: ಕಳೆದ ಮೂರು ವರ್ಷಗಳಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಇಲ್ಲದೇ ಸಾಕಷ್ಟು ತೊಂದರೆಯಾಗುತ್ತಿದ್ದು ಸರ್ಕಾರ ತಕ್ಷಣವೇ ಈ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂದು ಆಗ್ರಹಿಸಿ ಸೋಮವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿ ವೇತನ ಸಿಗದೆ ಬಡಕುಟುಂಬದ ಮಕ್ಕಳು ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸುವಂತಾಗಿದೆ. ಶಿಕ್ಷಣ ಇಲಾಖೆಯ ನಿಯಮಾವಳಿಯಂತೆ ಅರ್ಜಿ ಸಲ್ಲಿಸಿದ್ದರೂ ಪಾವತಿಯಾಗಿಲ್ಲ. ಈ ಬಗ್ಗೆ ಅಧಿಕಾರಿಗಳಿಂದಲೂ ಸಮರ್ಪಕ ಉತ್ತರ ಸಿಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದರೂ ಪಿಯುಸಿ ಹಾಗು ಪದವಿ ವಿದ್ಯಾರ್ಥಿ ನಿಲಯಗಳು ಪ್ರಾರಂಭವಾಗಿಲ್ಲ. ಪದವಿ ವಿದ್ಯಾರ್ಥಿಗಳಿಗೂ ತರಗತಿ ಪ್ರಾರಂಭವಾಗಿವೆ. ರಾಜ್ಯಾದ್ಯಂತ ವಸತಿ ನಿಲಯಗಳು ಕಾರ್ಯಾರಂಭ ಮಾಡಿಲ್ಲ. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ಬಹುತೇಕ ಕಡೆ ಸಮರ್ಪಕ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಕಾಲೇಜಿಗೆ ತೆರಳುವುದು ಕಷ್ಟವಾಗುತ್ತಿದೆ ಎಂದರು.
ಬಹುತೇಕ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಹೆಚ್ಚಿದೆ. ಇದು ಮಕ್ಕಳ ಕಲಿಕೆ ಮೇಲೆ ದುಷ್ಪರಿಣಾಮ ಬೀರುತ್ತಿದೆ. ತರಗತಿ ಆರಂಭವಾಗಿದ್ದರೂ ಬೋಧಕರಿಲ್ಲದೆ ಕಲಿಕೆ ಅಪೂರ್ಣವಾಗುತ್ತಿದೆ. ಸರ್ಕಾರ ಕೂಡಲೇ ಉಪನ್ಯಾಸಕರ ಹುದ್ದೆ ಭರ್ತಿಗೆ ಕ್ರಮ ವಹಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ಲೇಪಾಕ್ಷ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶ್ರೀನಿವಾಸ್, ನಗರಾಧ್ಯಕ್ಷ ವೇಣುಕುಮಾರ್, ಮೋಹಿತ್ ಇತರರಿದ್ದರು.