ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ ಸೌಕರ್ಯ

2KMD-1
Published on

ಕೆ.ಎಂ.ದೊಡ್ಡಿ: ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಸ್ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.


ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶನಿವಾರ ಯಲಾದಹಳ್ಳಿ, ಬಿದರಹಳ್ಳಿ ಕಾಡುಕೊತ್ತನಹಳ್ಳಿ, ಯಡಗನಹಳ್ಳಿ ಗ್ರಾಮಗಳ ಮಾರ್ಗವಾಗಿ ಮಂಡ್ಯ ತಲುಪುವ ಸಾರಿಗೆ ಬಸ್‌ಗೆ ಚಾಲನೆ ನೀಡಿ ಮಾತನಾಡಿದರು. ಬಸ್ ಸೌಕರ್ಯ ಇಲ್ಲದೆ ಶಾಲಾ- ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರಿತಪಿಸುತ್ತಿದ್ದ ಹಿನ್ನೆಲೆಯಲ್ಲಿ ಸಾರಿಗೆ ಸೌಕರ್ಯ ಕಲ್ಪಿಸಲಾಗುತ್ತಿದೆ ಎಂದರು.


ಜನಸಂಪರ್ಕ ಸಭೆಯಲ್ಲಿ ಬಸ್ ಸೌಲಭ್ಯವಿಲ್ಲದ ಸಂಬಂಧ ಸ್ಥಳೀಯ ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಜತೆ ಚರ್ಚಿಸಿ ಅಗತ್ಯ ಇರುವ ಗ್ರಾಮಗಳಿಗೆ ಸಾರಿಗೆ ಸೌಲಭ್ಯ ಕಲ್ಪಿಸಿದ್ದೆನೆ ಎಂದರು.


ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೂಕ್ತ ಸಮಯದಲ್ಲಿ ಬಸ್ ಸಂಚಾರ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಸಂಬಂಧಪಟ್ಟ ಗ್ರಾಮಗಳ ಜನತೆ ಬಸ್ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.


ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ತಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಅಲ್ಲದೆ ಭ್ರೂಣ ಹತ್ಯೆ ತಡೆಗಟ್ಟಲು ಜಿಲ್ಲಾ ಮಟ್ಟದ ತಾಲೂಕು ಮತ್ತು ಗ್ರಾಮ ಮಟ್ಟದಲ್ಲಿ ಅರಿವು ಮೂಡಿಸಿ ಭ್ರೂಣ ಹತ್ಯೆ ಮಾಡಿಸದಂತೆ ಸೂಕ್ತ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.
ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಹಾ ಅಪರಾಧವಾಗಿದ್ದು, ಈ ಬಗ್ಗೆ ವೈದ್ಯರು ಎಚ್ಚರಿಕೆಯಿಂದ ಕರ್ತವ್ಯ ಮಾಡಿ ಎಂದು ಕಿವಿಮಾತು ಹೇಳಿದರು.


ನಿತ್ಯ ಎತ್ತಿನಗಾಡಿಗಳು ಹೆಚ್ಚಾಗುತ್ತಿದ್ದು ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಖಾನೆಗೆ ಕಬ್ಬು ಸಾಗಿಸಲು ಬದಲಿ ರಸ್ತೆ ನಿರ್ಮಾಣದ ಬಗ್ಗೆ ಈಗಾಗಲೇ ಚಿಂತನೆ ನಡೆಸಲಾಗಿದ್ದು ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಶ್ರಮಿಸಲಾಗುವುದು ಎಂದರು.
ಜಿ.ಪಂ. ಮಾಜಿ ಅಧ್ಯಕ್ಷ ಬಿ.ಬಸವರಾಜು, ಮಾಜಿ ಸದಸ್ಯ ಎ.ಎಸ್.ರಾಜೀವ್, ತಾ.ಪಂ ಮಾಜಿ ಅಧ್ಯಕ್ಷ ಕಪನೀಗೌಡ, ಸಾರಿಗೆ ಇಲಾಖೆಯ ಸಂಚಾರ ಜಿಲ್ಲಾ ಘಟಕದ ನಿಯಂತ್ರಕ ಮುತ್ತುರಾಜು, ಸಂಚಾರ ನಿಯಂತ್ರಕ ಚಂದ್ರು, ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಲಿಂಗೇಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net