

ಚಿತ್ರದುರ್ಗ: ಪದವಿ ಪೂರ್ವ ಹಂತದಲ್ಲೇ ಉಪನ್ಯಾಸಕರು ಉನ್ನತ ಶಿಕ್ಷಣದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಅವರ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕೆಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಆರ್.ಪುಟ್ಟಸ್ವಾಮಿ ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಬೆಂಗಳೂರು ಕಾಲೇಜು ಮಾಹಿತಿ ಸಹಯೋಗದಲ್ಲಿ ನಗರದ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಕಚೇರಿಯಲ್ಲಿ ಶುಕ್ರವಾರ ಜಿಲ್ಲೆಯ ಪಿಯು ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರಿಗೆ ಏರ್ಪಡಿಸಿದ್ದ ಉನ್ನತ ಶಿಕ್ಷಣ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪಿಯು ನಂತರ ಯಾವ ಶಿಕ್ಷಣ ಪಡೆದರೆ ಅನುಕೂಲವಾಗಲಿದೆ ಎಂಬ ಮಾಹಿತಿ ಪದವಿ ಪೂರ್ವ ಹಂತದಲ್ಲಿಯೇ ನೀಡಿದರೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿದೆ. ಉನ್ನತ ಶಿಕ್ಷಣ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ನೀಡುವ ಮಾಹಿತಿ, ಸಲಹೆ, ಸೂಚನೆಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ಜವಾಬ್ದಾರಿಯನ್ನು ಉಪನ್ಯಾಸಕರು ನಿಬಾಯಿಸಬೇಕು ಎಂದರು.
ಡಿಡಿಪಿಐ ಎಂ.ಆರ್. ಮಂಜುನಾಥ್ ಮಾತನಾಡಿ, ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮಾಹಿತಿ ಕೊರತೆ ಇದೆ. ಅವರಿಗೆ ಸೂಕ್ತ ಮಾರ್ಗದರ್ಶನದ ಮೂಲಕ ಅವರ ಸರ್ವಾಂಗೀಣ ಪ್ರಗತಿಗೆ ಶ್ರಮಿಸಬೇಕಾಗಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ನೆರವಿಗೆ ಬ್ಯಾಂಕ್‌ಗಳು ಶೈಕ್ಷಣಿಕ ಸಾಲಸೌಲಭ್ಯ ನೀಡುತ್ತವೆ. ಇದರ ಜತೆಗೆ ಸರ್ಕಾರವೂ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದೆ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ನಾವೆಲ್ಲರೂ ಶ್ರಮಿಸೋಣ ಎಂದರು.
ಎಸ್‌ಆರ್‌ಎಸ್ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ.ಟಿ.ಎಸ್. ರವಿ ಮಾತನಾಡಿ, ಪಿಯು ಹಂತದಲ್ಲಿ ಮಕ್ಕಳಿಗೆ ಸ್ಪಷ್ಟವಾಗಿ, ಗೊಂದಲಕ್ಕೆ ಒಳಗಾಗದಂತೆ ತಮ್ಮ ಪ್ರತಿಭೆಗೆ ಪೂರಕವಾದ ಶಿಕ್ಷಣವನ್ನು ಆಯ್ಕೆ ಮಾಡಿಕೊಂಡರೆ ವಿದ್ಯಾರ್ಥಿಯ ಭವಿಷ್ಯ ಉಜ್ವಲವಾಗಿರುತ್ತದೆ ಎಂದರು. ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯಕ ಆಯುಕ್ತ ಪಿ.ವೈ.ದೇವರಾಜ್ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಸುಬ್ರಮಣ್ಯ, ನಾಜಿಯಾ, ಕಾಲೇಜು ಮಾಹಿತಿಯ ರಾಹುಲ್‌ರೆಡ್ಡಿ, ಆರ್ಥಿಕ ಸಲಹೆಗಾರ ತಿಪ್ಪೇಸ್ವಾಮಿ ಮತ್ತಿತರರು ಇದ್ದರು.