

ಮೈಸೂರು: ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನಿಂದ (ಎಬಿವಿಪಿ) ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಹಳೆಯ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಜೂನ್‌ನಿಂದ ಶೈಕ್ಷಣಿಕ ವರ್ಷ ಪ್ರಾರಂಭವಾಗಿದೆ. ಹಳ್ಳಿಯಿಂದ ಪಟ್ಟಣದ ಕಾಲೇಜುಗಳಿಗೆ ವಿದ್ಯಾಭ್ಯಾಸ ಮಾಡಲು ಬರುವತಂಹ ವಿದ್ಯಾರ್ಥಿಗಳಿಗೆ ಬಸ್ಸಿನ ಸಮಸ್ಯೆ ಉಂಟಾಗಿದೆ ಎಂದು ದೂರಿದರು.
ರಾಜ್ಯ ಸರ್ಕಾರ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿರುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಶಾಲಾ-ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಇದರಿಂದಾಗಿ ಸರಿಯಾಗಿ ತರಗತಿ, ಪರೀಕ್ಷೆಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹಳ್ಳಿಗಳಲ್ಲಿ ಅಗತ್ಯಕ್ಕೆ ತಕ್ಕಂತೆ ಬಸ್ ವ್ಯವಸ್ಥೆ ಇಲ್ಲ. ಇದರಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ನಡೆದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ಬಸ್ ಸಮಸ್ಯೆಯಿಂದಾಗಿ ಕೆಲ ದಿನಗಳ ಹಿಂದೆ ಹಾವೇರಿಯಲ್ಲಿ ವಿದ್ಯಾರ್ಥಿನಿ ಬಸ್ ಹತ್ತಲು ಹೋದಾಗ ಅಪಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳು, ಶಾಲಾ-ಕಾಲೇಜಿಗೆ ತೆರಳುವ ಸಮಯದಲ್ಲಿ ಹಾಗೂ ಹಿಂತಿರುಗುವ ಸಮಯದಲ್ಲಿ ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಬಸ್ ಸೌಲಭ್ಯ ಕಲ್ಪಿಸಬೇಕು. ಈಗಾಗಲೇ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಬಸ್ ಪ್ರಯಾಣ ಸೌಲಭ್ಯ ನೀಡಿರುವಂತೆ, ಎಲ್ಲ ವಿದ್ಯಾರ್ಥಿಗಳಿಗೂ ಉಚಿತವಾಗಿ ಪ್ರಯಾಣದ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿದರು.
ಮುಖಂಡರಾದ ಪ್ರೀತಮ್, ಸುಭಾಷ್, ಶ್ರೀಕಂಠ, ದಿನೇಶ್, ಆದರ್ಶ್, ಶ್ರೇಯಸ್, ದತ್ತ, ಅಮೃತ, ಐಶ್ವರ್ಯ, ರಮ್ಯಾ, ಲೇಖನಾ ಇತರರು ಇದ್ದರು.