ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ಸ್ವಯಂಉದ್ಯೋಗಕ್ಕೆ ಸಾಲ

19CBP3
Published on

ಚಿಕ್ಕಬಳ್ಳಾಪುರ: ಸರ್ಕಾರ ವಿವಿಧ ಯೋಜನೆಗಳಡಿ ಪಡೆದ ಸಾಲವನ್ನು ಸಕಾಲಕ್ಕೆ ಮರು ಪಾವತಿಸುವ ಮೂಲಕ ಹೊಸ ಫಲಾನುಭವಿಗಳಿಗೆ ಸೌಲಭ್ಯ ಸಿಗಲು ಸಹಕರಿಸುವಂತೆ ಆರ್ಯ ವೈಶ್ಯ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಅರುಣ್ ಮನವಿ ಮಾಡಿದರು.

ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಆರ‌್ಯವೈಶ್ಯ ಸಮುದಾಯದ ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 87 ಅರ್ಹ ಲಾನುಭವಿಗಳನ್ನು ಆಯ್ಕೆ ಮಾಡಿ, ತಲಾ ಒಂದು ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಇನ್ನೂ ಹೆಚ್ಚುವರಿ 13 ಲಕ್ಷ ರೂ.ನೀಡಲು ಕ್ರಮ ಕೈಗೊಳ್ಳಲಾಗಿದ್ದು, 100 ಕುಟುಂಬಗಳಿಗೆ ಅನುಕೂಲವಾಗುತ್ತದೆ ಎಂದರು.

ನಿಗಮದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ಸ್ವಯಂಉದ್ಯೋಗಕ್ಕೆ ನೇರ ಸಾಲ ವಿತರಣೆ ಯೋಜನೆಯನ್ನು ರಾಜ್ಯದಲ್ಲಿ ಮೊದಲ ಬಾರಿಗೆ ಅನುಷ್ಠಾನಗೊಳಿಸಲಾಗುತ್ತಿದೆ. ಇಂಜಿನಿಯರಿಂಗ್, ವೈದ್ಯಕೀಯ, ದಂತ ಸೇರಿ ವಿವಿಧ ಕೋರ್ಸ್‌ಗಳಿಗೆ ಮತ್ತು ಸ್ವಯಂಉದ್ಯೋಗಕ್ಕಾಗಿ ಶೇ.2ರ ಬಡ್ಡಿ ದರದಲ್ಲಿ ಗರಿಷ್ಠ 1 ಲಕ್ಷ ರೂ.ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸ್ವಯಂ ಉದ್ಯೋಗದಲ್ಲಿ ಸಾಂಪ್ರದಾಯಕ ವೃತ್ತಿಗಳ ಜತೆಗೆ ಹಸು ಸಾಕಣೆ, ಚಕ್ಕುಲಿ, ನಿಪ್ಪಟ್ಟು ಸೇರಿ ವಿವಿಧ ಉತ್ಪನ್ನಗಳ ಮಾರಾಟ ಮತ್ತು ಸೇವಾ ಚಟುವಟಿಕೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ವ್ಯವಸ್ಥಾಪಕ ಬಸವರಾಜು ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net