ವಿದ್ಯಾರ್ಥಿಗಳು ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬೇಕು

15 yelandur 06
Published on

ಯಳಂದೂರು: ವಿದ್ಯಾರ್ಥಿಗಳು ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಬೇಕೆಂದು ಜೆ.ಎಸ್.ಎಸ್. ಮಹಿಳಾ ಕಾಲೇಜಿನ ಪ್ರಾಚಾರ್ಯ ಎಚ್.ಎಸ್.ಚಂದ್ರಶೇಖರ್ ಸಲಹೆ ನೀಡಿದರು.
ಅವರು ಪಟ್ಟಣದ ಜೆ.ಎಸ್.ಎಸ್. ಬಾಲಕಿಯರ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಬೇಕು. ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಅತೀ ಹೆಚ್ಚು ಸಮಯವನ್ನು ಮೊಬೈಲ್ ಫೋನ್ ಬಳಕೆಯಲ್ಲಿ ವ್ಯರ್ಥ ಮಾಡುತ್ತಿದ್ದಾರೆ. ಅವಶ್ಯಕತೆ ಇದ್ದಲ್ಲಿ ಮಾತ್ರ ಇತಿಮಿತಿಯಲ್ಲಿ ಮೊಬೈಲ್ ಬಳಕೆ ಮಾಡಿಕೊಂಡು, ಬಹುಪಾಲು ಸಮಯವನ್ನು ಕ್ರಿಯಾಶೀಲ ಚಟುವಟಿಕೆಗಳಿಗೆ ಮೀಸಲಿಡಬೇಕೆಂದು ಕಿವಿಮಾತು ಹೇಳಿದರು.
ಪ್ರೌಢಶಾಲಾ ಮುಖ್ಯ ಶಿಕ್ಷಕಿ ಚಂದ್ರಕಲಾ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಅವರನ್ನು ಮುಖ್ಯವಾಹಿನಿಗೆ ತರುವುದು ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಉದ್ದೇಶವಾಗಿದೆ. ಇದರಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕೆಂದು ತಿಳಿಸಿದರು.
ಶಿಕ್ಷಕಿಯರಾದ ಕವಿತಾ, ಮಾಲತಿ, ಸವಿತಾ, ನಾಗಮಂಜುಳ, ವೀಣಾ, ವಿದ್ಯಾರ್ಥಿಗಳಾದ ಭವ್ಯಶ್ರೀ,ಕೀರ್ತಿ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net