

ಹೊಳೆನರಸೀಪುರ: ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ಜಯಶೀಲರಾದರೆ ಜಿಲ್ಲಾ ಮತ್ತು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗಲಿದೆ ಎಂದು ಬಿಇಒ ಭಾಗ್ಯಮ್ಮ ಸಲಹೆ ನೀಡಿದರು.
ಪಟ್ಟಣದ ಶಿಕ್ಷಕರ ಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ದಾರ್ ವಲ್ಲಭಭಾಯಿ ಪಟೇಲ್ ದೇಶಕ್ಕೆ ತನ್ನದೇ ಆದ ಸೇವೆಯನ್ನು ನೀಡಿದ್ದರಿಂದ ಅವರನ್ನು ಉಕ್ಕಿನ ಮನುಷ್ಯ ಎಂದು ಕರೆಯಲಾಗುತ್ತದೆ. ಇವರ ಜನ್ಮ ದಿನಾಚರಣೆ ಅಂಗವಾಗಿ ನಾವುಗಳು ಪ್ರತಿಜ್ಞಾ ವಿಧಿಯನ್ನು ಪಡೆಯುವ ಮೂಲಕ ಅವರ ತತ್ವ ಮತ್ತು ಅದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ.ಎಸ್.ಕುಮಾರಸ್ವಾಮಿ ಮಾತನಾಡಿ, ಈ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಶಾಲಾ ಹಾಗೂ ಕ್ಲಸ್ಟರ್ ಮಟ್ಟದಲ್ಲಿ ಭಾಗವಹಿಸಿ ಇದೀಗ ತಾಲೂಕು ಮಟ್ಟದಲ್ಲಿ ನಿಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲು ಬಂದಿದ್ದೀರಿ. ಇದು ಸಂತಸದ ವಿಷಯ ಎಂದು ಶುಭ ಹಾರೈಸಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಆರ್.ಬಿ.ಪುಟ್ಟೇಗೌಡ ಮಾತನಾಡಿ, ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಾಲೂಕಿನ ಜೋಡಿ ಗುಬ್ಬಿ ಶಾಲೆ ಶಿಕ್ಷಕ ಶಿವಕುಮಾರಾಚಾರಿ ರಾಷ್ಟ್ರ ಮಟ್ಟದ ಪ್ರತಿಭಾ ಪ್ರದರ್ಶನಕ್ಕೆ ಆಯ್ಕೆಯಾಗಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ವಿ.ಸುರೇಶ್‌ಕುಮಾರ್ ಮಾತನಾಡಿದರು. ಪ್ರೌಢಶಾಲಾ ಶಿಕ್ಷಕರ ಸಂಘದ ಜವರೇಗೌಡ, ಯತೀಶ್, ಗಂಗಾಧರ್, ಸಿದ್ದರಾಜು, ವೀರಭದ್ರ, ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.