ವಿದ್ಯಾರ್ಥಿಗಳು ಪಠ್ಯಕ್ಕಷ್ಟೇ ಸಮೀತವಾಗದಿರಲಿ

mysore
Published on

ಮೈಸೂರು: ಮಕ್ಕಳು ಪಠ್ಯಕ್ರಮಕ್ಕೆ ಮಾತ್ರ ಸೀಮಿತವಾಗದೆ, ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜೆಎಲ್‌ಬಿ ರಸ್ತೆಯಲ್ಲಿರುವ ಮಹಾರಾಜ ಪದವಿ ಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಂಗೀತ, ನೃತ್ಯ ಹಾಗೂ ಕ್ರೀಡಾ ಚಟುವಟಿಕೆಗಳು ಇವೆಲ್ಲವೂ ನಿಮ್ಮಲ್ಲಿರುವ ಕಲೆಯನ್ನು ಹೊರಗೆ ತೆಗೆದು ನಿಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಹಾಯ ಮಾಡುತ್ತವೆ. ಮಕ್ಕಳು ಸೋಲು-ಗೆಲುವಿನ ಬಗ್ಗೆ ಯೋಚನೆ ಮಾಡದೆ ನಿಮ್ಮ ಪ್ರಯತ್ನ ಮುಂದುವರಿಸಬೇಕು ಎಂದರು.

ಮಕ್ಕಳು ಶಿಕ್ಷಣವೆಂಬುದು ಅಂಕಕ್ಕೆ ಸೀಮಿತವಾಗಿದೆ ಎಂದು ಭಾವಿಸಿ ಅಂಕದ ಕಡೆಗೆ ಗಮನ ನೀಡಿ ಬೇರೆ ಚಟುವಟಿಕೆಗಳಲ್ಲಿ ಭಾಗವಹಿಸದೆ ಇರುತ್ತಾರೆ. ಈ ರೀತಿಯ ಮನೋಭಾವ ವಿದ್ಯಾರ್ಥಿಗಳಲ್ಲಿ ಮೂಡಬಾರದು. ವಿದ್ಯಾರ್ಥಿಗಳು ಪಠ್ಯಕ್ರಮಗಳನ್ನಷ್ಟೇ ಓದುವುದರ ಮೂಲಕ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು

ಶಿಕ್ಷಕರು ಸಹ ಶಾಲೆಗಳಲ್ಲಿ ಹಲವಾರು ಕಾರ್ಯಕ್ರಮ ಆಯೋಜಿಸುವ ಮೂಲಕ ಅವರಲ್ಲಿರುವ ಪ್ರತಿಭೆ ಗುರುತಿಸಿ ಅವರನ್ನು ಜಗತ್ತಿಗೆ ಪರಿಚಯಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಟಿ.ಜವರೇಗೌಡ ಮಾತನಾಡಿ, ಪ್ರತಿಭಾ ಕಾರಂಜಿಯನ್ನು ಸುಮಾರು 10-15 ವರ್ಷದಿಂದ ಮಾಡಲಾಗುತ್ತಿದ್ದು, ಇದಕ್ಕೆ ಮುಖ್ಯ ಕಾರಣ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಅನಾವರಣಗೊಳಿಸುವುದಾಗಿದೆ. ಮಕ್ಕಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು.

ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಬಿ.ಸೋಮೇಗೌಡ ಮಾತನಾಡಿ, ನಾಲ್ಕು ಗೋಡೆಗಳ ಮಧ್ಯೆ ಪಠ್ಯಕ್ರಮವನ್ನು ಆಯೋಜಿಸಿಕೊಂಡು ಕಾಲ ಕಳೆಯುವುದು ಬೇಡ. ಮಕ್ಕಳು ಹೊರ ಜಗತ್ತಿನ ಬಗ್ಗೆ ತಿಳಿದುಕೊಳ್ಳಬೇಕು ಎನ್ನುವ ದೃಷ್ಟಿಯಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಹೊಸ ಪ್ರತಿಭೆಗಳನ್ನೂ ಜಗತ್ತಿಗೆ ನೀಡುವ ಕೆಲಸ ಮಾಡುತ್ತಿದೆ ಎಂದರು.

ಪ್ರತಿ ಹಂತದಲ್ಲೂ ಒಂದು ಮಗು ಗಳಿಸುವ ಪ್ರಶಸ್ತಿಯ ಹಿಂದೆ ಶಿಕ್ಷಕರ ಕೊಡುಗೆ ಅಪಾರ. ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಸ್ಥಾನಕ್ಕೆ ಹಾಗೂ ಉತ್ತಮ ವ್ಯಕ್ತಿಗಳಾಗಿ ರೂಪುಗೊಂಡರೆ ಅದನ್ನು ಮೊದಲು ಸಂತೈಸುವವರು ಶಿಕ್ಷಕರು. ಯಾವುದೇ ವಿಚಾರ ಕಲಿಕೆಯಾದರು ಅದನ್ನು ಕಲಿಸಿದ ಗುರುಗಳನ್ನು ಎಂದಿಗೂ ಮರೆಯಬಾರದು ಎಂದರು.

ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಎಂ.ಆರ್ ಅನಂತರಾಜು, ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು, ನಂಜನಗೂಡಿನ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಮೈಸೂರು ಜಿಲ್ಲಾ ಘಟಕದ ಕ.ರಾ ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಕೃಷ್ಣ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ದುಂಡಯ್ಯ, ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಹಾಗೂ ಕ.ರಾ.ಎಸ್‌ಟಿ ಪ್ರಾಥಮಿಕದ ಅಧ್ಯಕ್ಷ ಟಿ.ಸಿ ಕೃಷ್ಣಮೂರ್ತಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net