

ಮದ್ದೂರು: ವಿದ್ಯಾರ್ಥಿಗಳು ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಲಹೆ ನೀಡಿದರು.
ತಾಲೂಕಿನ ಕೊಪ್ಪದ ಸರ್ವೋದಯ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ವಿದ್ಯಾರ್ಥಿಗಳು ಬೆಳಗ್ಗೆ ಮತ್ತು ಸಂಜೆ ವೇಳೆ ಒಂದು ಗಂಟೆ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಂಡರೆ ಆರೋಗ್ಯ ಸದೃಢವಾಗಿರುತ್ತದೆ. ತಮಗಿಷ್ಟವಾದ ಕ್ರೀಡೆಯಲ್ಲಿ ನಿರಂತರವಾಗಿ ಅಭ್ಯಾಸ ಮಾಡಿದರೆ ಉನ್ನತ ಸಾಧನೆ ಮಾಡಲು ಸಾಧ್ಯ ಎಂದರು.
ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಮಾತನಾಡಿ, ವಿದ್ಯಾರ್ಥಿ ಜೀವನ ಅತ್ಯಂತ ಪ್ರಮುಖ ಘಟ್ಟ. ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ಕ್ರೀಡಾಕೂಟದಲ್ಲಿ 22 ಕಾಲೇಜುಗಳ 1 ಸಾವಿಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸರ್ವೋದಯ ವಿದ್ಯಾವರ್ಧಕ ಟ್ರಸ್ಟ್ ಅಧ್ಯಕ್ಷ ಬಿ.ವಿವೇಕಾನಂದ, ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಎಸ್. ಉಮೇಶ್, ಗ್ರಾಪಂ ಅಧ್ಯಕ್ಷ ನವೀನ್‌ಕುಮಾರ್, ಉಪಾಧ್ಯಕ್ಷ ಕೃಷ್ಣೇಗೌಡ, ಸರ್ವೋದಯ ವಿದ್ಯಾವರ್ಧಕ ಟ್ರಸ್ಟ್ ಕಾರ್ಯದರ್ಶಿ ಕೆ. ಮಾಯಣ್ಣ, ಖಜಾಂಚಿ ಹುಚ್ಚೇಗೌಡ, ಆಡಳಿತಾಧಿಕಾರಿ ಡಿ.ಪಿ.ಸ್ವಾಮಿ ಪ್ರಾಂಶುಪಾಲ ಎ.ಸಿ.ಗೀತಾ, ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್ ಇದ್ದರು.