

ವಿರಾಜಪೇಟೆ: ವಿರಾಜಪೇಟೆ ಪುರಸಭೆ ವತಿಯಿಂದ ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ ಯೋಜನೆಯ ಹಂತ 4ರಡಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಲಯಕ್ಕೆ ರೆಫ್ರಿಜರೇಟರ್, ಲ್ಯಾಪ್‌ಟಾಪ್, ವಾಟರ್ ಫಿಲ್ಟರ್ ಸೇರಿದಂತೆ ಇತರ ಕಚೇರಿ ಬಳಕೆ ಸಾಮಗ್ರಿಗಳನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಬುಧವಾರ ವಿತರಿಸಿದರು.
ಶಾಸಕರ ಗೃಹ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದ ಶಾಸಕರು, ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಸರ್ಕಾರದಿಂದ ಅನೇಕ ಸವಲತ್ತುಗಳನ್ನು ಒದಗಿಸಲಾಗುತ್ತಿದೆ. ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತಾಗಬೇಕು. ಎಲ್ಲ ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸ ಮಾಡಿ ಸಮಾಜದ ಮುಖ್ಯವಾಹಿನಿಗೆ ಬರುವಂತಾಗಬೇಕು. ವಿದ್ಯಾರ್ಥಿಗಳು ಕನ್ನಡ ಭಾಷೆಗೆ ಹೆಚ್ಚಿನ ಪ್ರಾಮುಖ್ಯ ನೀಡಬೇಕು ಎಂದು ಹೇಳಿದರು.
ಪುರಸಭೆ ಅಧ್ಯಕ್ಷೆ ಮನೆಯಪಂಡ ದೇಚಮ್ಮ ಕಾಳಪ್ಪ ಮಾತನಾಡಿ, ಶಾಸಕರ ಮುತುವರ್ಜಿಯಿಂದ ರಾಜ್ಯ ಸರ್ಕಾರದಿಂದ ವಿರಾಜಪೇಟೆ ಪುರಸಭೆಗೆ ಹೆಚ್ಚಿನ ಅನುದಾನ ಒದಗಿಸಲಾಗಿದೆ. ಅದರಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿನಿಲಯಕ್ಕೆ ವಿವಿಧ ಸಾಮಗ್ರಿಗಳನ್ನು ಒದಗಿಸಲಾಗಿದೆ. ಇದನ್ನು ಸಮರ್ಪಕವಾಗಿ ಬಳಸುವಂತಾಗಬೇಕು ಎಂದರು.
ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಪುರಸಭೆ ಮುಖ್ಯಾಧಿಕಾರಿ ಪಿ.ಕೆ ನಾಚಪ್ಪ, ಪರಿಸರ ಇಂಜಿನಿಯರ್ ರೀತು ಸಿಂಗ್, ಪುರಸಭೆ ಸದಸ್ಯರಾದ ಎಸ್.ಎಚ್.ಮತಿನ್, ಮಹಮ್ಮದ್ ರಾಫಿ, ರಾಜೇಶ್ ಪದ್ಮನಾಭ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಅಗಷ್ಟಿನ್ ಬೆನ್ನಿ, ಹಮೀದ್, ಪುರಸಭೆ ಅಧಿಕಾರಿಗಳು, ಸ್ಥಳೀಯ ಮುಖಂಡರಾದ ಎ.ವಿ.ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿನಿಲಯದ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.