

ಚಿತ್ರದುರ್ಗ: ತಾಲೂಕಿನ ಅನ್ನೇಹಾಳ್-ಜಂಪಯ್ಯನಹಟ್ಟಿ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಊಟ ಸೇವಿಸಿದ ಬಳಿಕ ಅಸ್ವಸ್ಥಗೊಂಡಿರುವ ಪ್ರತ್ಯೇಕ ಘಟನೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಲಯದ ಮೇಲ್ವಿಚಾರಕಿ ಮರಾಠಿ ಲಕ್ಷ್ಮೀದೇವಿ ಅವರನ್ನು ಅಮಾನತುಗೊಳಿಸಿ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.
ಈ ವಿದ್ಯಾರ್ಥಿ ನಿಲಯದಲ್ಲಿ ಕಳೆದ ಜುಲೈ 12ರಂದು ರಾತ್ರಿ ಊಟ ಸೇವಿಸಿದ ಬಳಿಕ 8ರಿಂದ 9 ಮಕ್ಕಳು ಅಸ್ವಸ್ಥರಾಗಿದ್ದು, ಅವರಿಗೆ ಗೊಡಬನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಘಟನೆ ಹಿನ್ನೆಲೆಯಲ್ಲಿ ವಾರ್ಡನ್‌ಗೆ ನೋಟಿಸ್ ಜಾರಿ ಮಾಡಲಾಗಿತ್ತು.
ಬಳಿಕ ಆ.4ರಂದು ಇದೇ ವಿದ್ಯಾರ್ಥಿ ನಿಲಯದ ಐವರು ಮಕ್ಕಳು ರಾತ್ರಿ ಊಟದ ಬಳಿಕ ಅಸ್ವಸ್ಥಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ಹಾಸ್ಟೆಲ್‌ನಲ್ಲಿ ಪದೇ ಪದೆ ಮಕ್ಕಳು ಅಸ್ವಸ್ಥರಾಗಿದ್ದರೂ ಇಲಾಖೆ ಮೇಲಧಿಕಾರಿಗೆ ಮಾಹಿತಿ ನೀಡಿಲ್ಲ. ಊಟೋಪಚಾರದ ವ್ಯವಸ್ಥೆಯಲ್ಲಿ ಗಮನಹರಿಸದೆ ಕರ್ತವ್ಯ ನಿರ್ಲಕ್ಷ್ಯ ತೋರಿರುವುದು ಮೇಲ್ನೋಟಕ್ಕೆ ಕಂಡುಬಂದಿತ್ತು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಅವರ ವರದಿ ಆಧರಿಸಿ ಸಿಇಒ ಅವರು, ಅಮಾನತು ಆದೇಶ ಹೊರಡಿಸಿದ್ದಾರೆ.