

ಕೊಡಗು : ಸರ್ಕಾರ ವಿದ್ಯುತ್ ದರ ಹೆಚ್ಚಿಸಿ ಗಾಯದ ಮೇಲೆ ಬರೆ ಎಳೆದಿದೆ. ಮುಂದಿನ ದಿನಗಳಲ್ಲಿ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡದಿದ್ದರೆ ಜಿಲ್ಲಾದ್ಯಂತ ಹೋರಾಟ ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮನು ಸೋಮಯ್ಯ ಎಚ್ಚರಿಕೆ ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸಿದ್ದಾಪುರದ ಸ್ವರ್ಣಮಾಲ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ರೈತರು ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಬೇಕು. ಪ್ರಶ್ನೆ ಮಾಡುವ ಮೂಲಕ ಪರಿಹಾರ ಕಂಡುಕೊಳ್ಳಲು ಮುಂದಾಗಬೇಕು. ಕಾಡಾನೆ-ಮಾನವ ಸಂಘರ್ಷ ಹಲವಾರು ವರ್ಷಗಳಿಂದ ನಡೆಯುತ್ತ ಬಂದಿದ್ದರೂ ಅರಣ್ಯ ಇಲಾಖೆ ಕಿಂಚಿತ್ತು ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು.
ಸಂಘದ ಅಮ್ಮತ್ತಿ ಹೋಬಳಿಯ ಅಧ್ಯಕ್ಷ ಮಂಡೇಪಂಡ ಪ್ರವೀಣ್ ಬೋಪಯ್ಯ, ಪ್ರಧಾನ ಕಾರ್ಯದರ್ಶಿ ಸುಜ್ಞೆ ಬೋಪಯ್ಯ, ಕಾನೂನು ಸಲಹೆಗಾರ ಕೆ.ಬಿ.ಹೇಮಚಂದ್ರ, ಸಂಚಾಲಕ ಪುಚ್ಚಿಮಾಡ ಸುಭಾಷ್ ಸುಬ್ಬಯ್ಯ, ಕೋಶಾಧಿಕಾರಿ ಸಭೀತಾ ಭೀಮಯ್ಯ ಇತರರು ಇದ್ದರು.