

ನಾಗಮಂಗಲ: ಜಾನುವಾರುಗಳಿಗೆ ಮೇವು ತರಲು ಹೋಗಿದ್ದ ವೇಳೆ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಮೃತಪಟ್ಟಿದ್ದಾರೆ.
ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಅಘಲೆಕೊಪ್ಪಲು ಗ್ರಾಮದ ಗಿರೀಶ್ (27) ಮೃತ. ಜಾನುವಾರುಗಳಿಗೆ ಮೇವು ತರಲು ಭಾನುವಾರ ತಮ್ಮ ಜಮೀನಿಗೆ ಹೋಗಿದ್ದರು. ಈ ವೇಳೆ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಗಮನಿಸದೆ ತುಳಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಕ್ಕದ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದ ರೈತರು ಗಮನಿಸಿ ರಕ್ಷಿಸಲು ಮುಂದಾಗುವಷ್ಟರಲ್ಲಿ ಮೃತಪಟ್ಟಿದ್ದ. ವಿಷಯ ತಿಳಿದು ಸ್ಥಳಕ್ಕೆ ಸೆಸ್ಕ್ ಅಧಿಕಾರಿಗಳು, ಬಿಂಡಿಗನವಿಲೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಸೆಸ್ಕ್ ನಿರ್ಲಕ್ಷ್ಯದಿಂದ ಯುವಕ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಇಲಾಖೆ ವತಿಯಿಂದ ಪರಿಹಾರ ನೀಡಲಾಗುವುದು ಎಂದು ಸೆಸ್ಕ್ ಅಧಿಕಾರಿಗಳು ಕುಟುಂಬದವರಿಗೆ ಭರವಸೆ ನೀಡಿದ್ದಾರೆ. ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.