ವಿದ್ಯುತ್ ಸಂಪರ್ಕ ಕಲ್ಪಸಲು ಕ್ರಮಕ್ಕೆ ಡಿಸಿ ಸೂಚನೆ

ವಿದ್ಯುತ್ ಸಂಪರ್ಕ ಕಲ್ಪಸಲು ಕ್ರಮಕ್ಕೆ ಡಿಸಿ ಸೂಚನೆ
Published on

ಹಾಸನ: ಗಂಗಾ ಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶನಿವಾರ ಸಂಜೆ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಾಸ್ಟೆಲ್‌ನಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಸರ್ಕಾರದಿಂದ ದೊರಕುವ ಸವಲತ್ತುಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನಹರಿಸುವಂತೆ ಮಕ್ಕಳಿಗೆ ತಿಳಿವಳಿಕೆ ನೀಡುವಂತೆ ತಿಳಿಸಿದರು. ಸಮಾಜಕ್ಕೆ ಹಾಗೂ ಇಡಿ ಸಮುದಾಯಕ್ಕೆ ಒಳಿತಾಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಕಿವಿ ಮಾತು ಹೇಳಿದರು.

ಸಮಿತಿ ಸದಸ್ಯರಾದ ಮರಿಜೋಸೆಫ್, ನಾರಾಯಣ ದಾಸ್, ಹೂರಾಜ್, ಸೋಮಶೇಖರ್, ವಿಜಯಕುಮಾರ್ ಮತ್ತಿತರರು ಸಭೆಯಲ್ಲಿ ಮಾತನಾಡಿ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ, ಜಾಗ ಒತ್ತುವರಿ, ಸ್ಮಶಾನ ಜಾಗ, ಅಕ್ರಮ ಮದ್ಯ ಮಾರಾಟ, ಜೀತ ವಿಮುಕ್ತರಿಗೆ ಜಮೀನು ನೀಡುವ ಬಗ್ಗೆ, ಹೇಮಾವತಿ ಮುಳುಗಡೆ ಸಂತ್ರಸ್ತರಿಗೆ ನಿವೇಶನ ಹಕ್ಕು ಪತ್ರ, ಖಾತೆ ಬದಲಾವಣೆ, ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಮತ್ತಿತರ ವಿಷಯಗಳನ್ನು ಸಭೆಯ ಗಮನಕ್ಕೆ ತಂದರು.

ಜಿಲ್ಲಾಧಿಕಾರಿಯವರು ಸಭೆಯಲ್ಲಿ ಚರ್ಚಿಸಿದ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಬಿ.ಆರ್.ಪೂರ್ಣಿಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಉಪ ವಿಭಾಗಾಧಿಕಾರಿ ಶೃತಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಲಕ್ಷ್ಮೇಗೌಡ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net