ಮದ್ದೂರು: ಕಾಂಗ್ರೆಸ್ ಸರ್ಕಾರ ಜಾರಿಗೆ ತರುತ್ತಿರುವ ಜನಪರ ಕಾರ್ಯಕ್ರಮಗಳನ್ನು ನೋಡಿ ವಿರೋಧ ಪಕ್ಷದ ನಾಯಕರಿಗೆ ತಡೆದುಕೊಳ್ಳಲು ಸಾಧ್ಯವಾಗದೆ ಮನ ಬಂದಂತೆ ಮಾತನಾಡುತ್ತಿದ್ದಾರೆ. ಅವರ ಮಾತಿಗೆಲ್ಲ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ಗೊರವನಹಳ್ಳಿ ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಈಗಾಗಲೇ ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ನಾಲ್ಕು ಗ್ಯಾರಂಟಿಗಳನ್ನು ಈಡೇರಿಸಿದ್ದೇವೆ. ಮುಂದಿನ ದಿನಗಳಲ್ಲಿ ಮತ್ತೊಂದು ಗ್ಯಾರಂಟಿಯನ್ನು ಎಡೇರಿಸುವ ಮೂಲಕ ರಾಜ್ಯ ಮತ್ತು ರಾಷ್ಟ್ರದಲ್ಲಿ ನುಡಿದಂತೆ ನಡೆದ ಏಕೈಕ ಪಕ್ಷ ನಮ್ಮದು ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ ಎಂದು ಸರ್ಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರು ಕಾಂಗ್ರೆಸ್‌ನ 40 ರಿಂದ 45 ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಅನ್ಯ ಪಕ್ಷದವರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಬದಲಾಗಿ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ತಪ್ಪಾಗಿ ಹೇಳಿದ್ದಾರೆ. ಅನ್ಯ ಪಕ್ಷಗಳಿಂದ ಚುನಾಯಿತರಾಗಿರುವ ಶಾಸಕರೇ ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ. ಮೊದಲು ಅವರ ಶಾಸಕರು, ಸಂಸದರನ್ನು ಸಂಪರ್ಕದಲ್ಲಿ ಇಟ್ಟುಕೊಳ್ಳಲಿ. ಬಳಿಕ ಕಾಂಗ್ರೆಸ್ ಶಾಸಕರ ಬಗ್ಗೆ ಮಾತನಾಡಲಿ. 45 ಶಾಸಕರಲ್ಲ, 4 ಜನ ಶಾಸಕರನ್ನು ಕರೆದುಕೊಂಡು ಹೋಗಲು ಆಗಲ್ಲ. ಸಂತೋಷ್ ಅವರಿಗೆ ಬೇರೆ ಉದ್ಯೋಗ ಇಲ್ಲ. ಅದಕ್ಕೆ ಏನೇನೋ ಮಾತನಾಡುತ್ತಿದ್ದಾರೆ ಎನ್ನುವ ಮೂಲಕ ಟಾಂಗ್ ನೀಡಿದರು.