ವಿರೋಧಪಕ್ಷ ಕಾಂಗ್ರೆಸ್‌ಗೆ ಜವಾಬ್ದಾರಿಯಿಲ್ಲ: ಮಂಗಳಾ ಸೋಮಶೇಖರ್ ಟೀಕೆ

2 (1)
Published on

ಮೈಸೂರು: ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಜವಾಬ್ದಾರಿಯುತ ಪ್ರತಿಪಕ್ಷವಾಗಿಯೂ ಕಾಂಗ್ರೆಸ್ ನಡೆದುಕೊಳ್ಳುತ್ತಿಲ್ಲ ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಟೀಕಿಸಿದರು.


ಮಳೆಯಿಂದಾಗಿ ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಜನರು ತೊಂದರೆ ಅನುಭವಿಸುತ್ತಿದ್ದಾರೆ. ಆದಾಗ್ಯೂ ಖಾಲಿಯಿಲ್ಲದ ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ ನಾಯಕರು ಈಗಲೇ ಕಾದಾಟ ನಡೆಸಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಈ ಪಕ್ಷಕ್ಕೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದರು.


2023ರ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಿ, ಮುಂದಿನ ಯೋಜನೆಗಳೇನೆಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕಿತ್ತು. ಆದರೆ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಉತ್ಸವಗಳನ್ನು ಆಚರಿಸಿಕೊಳ್ಳುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಜನರು ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.


ಜಾತಿ ಹೆಸರಿನಲ್ಲಿ ಮತ ಕೇಳಲು ಕಾಂಗ್ರೆಸ್ ಮುಂದಾಗಿದೆ. ಡಿ.ಕೆ.ಶಿವಕುಮಾರ್ ಜಾತಿಯನ್ನು ಮುನ್ನೆಲೆಗೆ ತಂದಿರುವುದಕ್ಕೆ ಸಿದ್ದರಾಮಯ್ಯ ಅನುಯಾಯಿ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಟೀಕಿಸಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಅವರ ಅಸ್ತಿತ್ವ ಮುಖ್ಯವಷ್ಟೇ ಹೊರತು ಜನರ ಸಮಸ್ಯೆಗಳಲ್ಲ ಎಂದು ಕಿಡಿಕಾರಿದರು.
ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉತ್ತಮ ಆಡಳಿತ ನೀಡುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನಪರ ನೀತಿಗಳನ್ನು ಕಾರ್ಯಗತಗೊಳಿಸುತ್ತಿದ್ದಾರೆ. ಆದರೆ, ಇದನ್ನು ಸಹಿಸಿಕೊಳ್ಳದ ಕಾಂಗ್ರೆಸ್ ಅನಗತ್ಯ ಟೀಕೆ ಮಾಡುತ್ತಿದೆ ಎಂದು ಕಿಡಿಕಾರಿದರು.


ಭ್ರಷ್ಟಾಚಾರದಿಂದಾಗಿಯೇ ಜಾರಿ ನಿರ್ದೇಶನಾಲಯದ ತನಿಖೆಯನ್ನು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಎದುರಿಸುತ್ತಿದ್ದಾರೆ. ಆದರೆ, ಅದನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು ಅವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದರು.
ಬಿಜೆಪಿ ಮುಖಂಡರಾದ ಶ್ರೀನಿವಾಸ್‌ಗೌಡ, ಡಾ.ವಸಂತಕುಮಾರ್, ಎನ್.ರಾಜ್‌ಕುಮಾರ್, ಪಾಪಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net