ವಿವಿಧ ಆಸ್ಪತ್ರೆಗಳಿಗೆ ಡಿಎಚ್‌ಒ ಭೇಟಿ

NGL dho 1
Published on

ನಾಗಮಂಗಲ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ತಾಲೂಕಿನ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್ ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮುಖ್ಯ ಆಡಳಿತ ವೈದ್ಯಾಧಿಕಾರಿಯಿಂದ ಆಸ್ಪತ್ರೆಗೆ ಸಂಬಂಧಿಸಿದ ಮಾಹಿತಿ ಪಡೆದರು. ನಂತರ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಸನ್ನ ಅವರಿಂದ ತಾಲೂಕಿನ ಆರೋಗ್ಯ ಇಲಾಖೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಪಡೆದರು. ಇದರೊಂದಿಗೆ ಸಿಬ್ಬಂದಿ ಹಾಗೂ ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಚರ್ಚಿಸಿದರು.

ಹೊನ್ನಾವರ ಪ್ರಾಥಮಿಕ ಆರೋಗ್ಯ ಕೇಂದ್ರ, ಬಿಂಡಿಗನವಿಲೆ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಬ್ರಹ್ಮದೇವರಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭ ಆಸ್ಪತ್ರೆಗಳಲ್ಲಿನ ಸ್ವಚ್ಛತೆ, ಮೂಲಸೌಲಭ್ಯ, ಸಿಬ್ಬಂದಿ ಹಾಜರಾತಿ, ಲ್ಯಾಬ್ ಹಾಗೂ ಔಷಧ ವಿತರಣೆಯನ್ನು ಪರಿಶೀಲಿಸಿದರು. ನವಜಾತ ಶಿಶುಗಳಿಗೆ ನೀಡಲಾಗುವ ಚುಚ್ಚುಮದ್ದುಗಳ ದಾಸ್ತಾನು ಹಾಗೂ ಬಳಕೆ ಕುರಿತಾಗಿ ಮಾಹಿತಿ ನೀಡಿದರು. ಈ ಸಂದರ್ಭ ಆಸ್ಪತ್ರೆಗಳಲ್ಲಿದ್ದ ರೋಗಿಗಳ ಆರೋಗ್ಯ ವಿಚಾರಿಸಿ ಸಮಸ್ಯೆಗಳನ್ನು ಆಲಿಸಿದರು.

ಟಿಎಚ್‌ಒ ಡಾ.ಪ್ರಸನ್ನ, ಡಿಎಚ್‌ಒ ಡಾ.ಶಶಿಧರ್, ಡಾ.ಟಿಪ್ಪುಸುಲ್ತಾನ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಿದ್ದಲಿಂಗಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net