

ಹನೂರು: ಪಟ್ಟಣದಲ್ಲಿ ಪ್ರಗತಿಯಲ್ಲಿರುವ ಒಕ್ಕಲಿಗರ ಸಮುದಾಯ ಭವನ, ಸ್ವಾಮಿಹಳ್ಳದ ಸೇತುವೆ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದ ಕಟ್ಟಡ ನಿರ್ಮಾಣ ಕಾಮಗಾರಿಯ ಸ್ಥಳಕ್ಕೆ ಮಂಗಳವಾರ ಶಾಸಕ ಆರ್.ನರೇಂದ್ರ ಭೇಟಿ ನೀಡಿ ಪರಿಶೀಲಿಸಿದರು.
ಕೆಂಪೇಗೌಡ ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಸ್ಥಳಕ್ಕೆ ತೆರಳಿದ ಶಾಸಕರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಜನರಿಂದ ತೀವ್ರ ಅಕ್ಷೇಪ ಕೇಳಿಬಂದಿದೆ. ಹಾಗಾಗಿ ಈ ಬಗ್ಗೆ ಕೂಡಲೇ ಅಗತ್ಯ ಕ್ರಮಕೈಗೊಂಡು ಭವನದ ಸುತ್ತಲೂ ಕಾಂಪೌಂಡ್ ನಿರ್ಮಿಸುವುದರ ಜತೆಗೆ ಬಾಕಿ ಉಳಿದಿರುವ ಕಾಮಗಾರಿಯನ್ನು ಇನ್ನು 15 ದಿನದೊಳಗೆ ಪೂರ್ಣಗೊಳಿಸಬೇಕು. ಈ ಬಗ್ಗೆ ಯಾವುದೇ ನಿರ್ಲಕ್ಷ್ಯ ಸಲ್ಲದು ಎಂದು ನಿರ್ಮಿತಿ ಕೇಂದ್ರದ ಎಇಇ ರವಿಕುಮಾರ್ ಅವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಳಿಕ ಹನೂರು ಮಣಗಳ್ಳಿ ಮಾರ್ಗದ ಸ್ವಾಮಿಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಿರುವ 1.5 ಕೋಟಿ ರೂ. ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಗುಣಮಟ್ಟವನ್ನು ಕಾಯ್ದುಕೊಳ್ಳುವುದರ ಮೂಲಕ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ನಂತರ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಮೇಲಂತಸ್ತಿನ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು.
ನಿರ್ಮಿತಿ ಕೇಂದ್ರದ ಜೆಇ ಮಹಾದೇವಶೆಟ್ಟಿ, ಪಪಂ ಉಪಾಧ್ಯಕ್ಷ ಗಿರೀಶ್, ಮಾಜಿ ಸದಸ್ಯ ಮಾದೇಶ್, ಒಕ್ಕಲಿಗರ ಸಂಘದ ನಿರ್ದೇಶಕ ಮಂಜೇಶ್, ಮುಖಂಡರಾದ ಚಿಕ್ಕತಮ್ಮಯ್ಯ, ಮಾದೇಶ್, ನಿಂಗಣ್ಣ, ರವಿ ಇನ್ನಿತರಿದ್ದರು.