

ಔರಾದ್: ತಾಲೂಕಿನಲ್ಲಿ ವಿವಿಧ ಗ್ರಾಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಮಂಗಳವಾರ ಚಾಲನೆ ನೀಡಿದರು. ಕೆಲವು ಕಾಮಗಾರಿಗಳ ಉದ್ಘಾಟನೆ ಸಹ ನೆರವೇರಿಸಿದರು.
ಔರಾದ್ ನಲ್ಲಿ 110/11 ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ಭೂಮಿಪೂಜೆ ನೆರವೇರಿಸಿದ ಸಚಿವರು, ಔರಾದ್- ಖಂಡಿಕೇರಿ-ಮುಧೋಳ ರಸ್ತೆ ಕಾಮಗಾರಿ, ಕುಡಿಯುವ ನೀರು ಸರಬರಾಜು ಕಾಮಗಾರಿ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಸತಿಗೃಹ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಪಟ್ಟಣದ ಸರ್ಕಾರಿ ಮಹಿಳಾ ಐಟಿಐ ಕಾಲೇಜು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹೆಚ್ಚುವರಿ ಕೋಣೆಗಳ ಉದ್ಘಾಟನೆ ಸಹ ಮಾಡಿದರು.
ಈ ವೇಳೆ ಮಾತನಾಡಿದ ಸಚಿವ ಚವ್ಹಾಣ್, ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ರಾಜ್ಯ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಔರಾದ್ ತಾಲೂಕಿನಲ್ಲಿ ಇನ್ನಷ್ಟು ವಿದ್ಯುತ್ ಸೌಕರ್ಯಗಳನ್ನು ಕಲ್ಪಿಸಬೇಕೆಂಬುದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಅದರಂತೆ 110/11 ಕೆವಿ ವಿದ್ಯುತ್ ಉಪ ಕೇಂದ್ರ ಕಾರ್ಯಾರಂಭಿಸಲಿದೆ ಎಂದು ತಿಳಿಸಿದರು. ಅಧಿಕಾರಿಗಳು, ಗಣ್ಯರು ಇದ್ದರು.