

ಹಾಸನ: ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈಡೇರಿಸುವ ಮೂಲಕ ಅಗತ್ಯ ಕ್ರಮವಹಿಸಿ ನ್ಯಾಯ ಒದಗಿಸುವಂತೆ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ನೇತೃತ್ವದಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಸಿಐಟಿಯು ಪ್ರಧಾನ ಕಾರ್ಯದರ್ಶಿ ಎಂ.ಬಿ. ಪುಷ್ಪಾ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನಮ್ಮ ಪ್ರಮುಖ ಹಕ್ಕೊತ್ತಾಯಗಳೆಂದರೆ, ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಹಿಂಪಡೆಯಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಬೇಕು. ಶ್ರೀಮಂತರ ಮೇಲಿನ ತೆರಿಗೆ ಹೆಚ್ಚಿಸಿ, ಬಡವರಿಗೆ ಬದುಕಲು ಅವಕಾಶ ಕಲ್ಪಿಸುವ ನೀತಿಗಳನ್ನು ಜಾರಿಗೆ ತರಬೇಕು. ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್ ಪಡೆದು ಕೃಷಿ ಬೆಳೆಗಳಿಗೆ ಲಾಭದಾಯಕ ಬೆಂಬಲ ಬೆಲೆ ಖಾತರಿಪಡಿಸಿ ಎಪಿಎಂಸಿ ವ್ಯವಸ್ಥೆಯನ್ನು ಬಲಗೊಳಿಸಬೇಕು. ಗೊಬ್ಬರ ಒಳಗೊಂಡಂತೆ ಕೃಷಿ ಇಡುವಳಿಗಳಿಗೆ ಸಬ್ಸಿಡಿ ಕಡಿತಗೊಳಿಸುವ ನೀತಿಗಳನ್ನು ಕೈಬಿಡಬೇಕು ಎಂದು ಮನವಿ ಮಾಡಿದರು.
ರೈಲ್ವೆ, ವಿದ್ಯುತ್ ಒಳಗೊಂಡು ಎಲ್ಲಾ ಸಾರ್ವಜನಿಕ ಕ್ಷೇತ್ರಗಳ ಎಲ್ಲಾ ಸ್ವರೂಪದ ಖಾಸಗಿಕರಣವನ್ನು ಕೈಬಿಡಬೇಕು. ಸಾರ್ವಜನಿಕ ರಂಗದ ಕೈಗಾರಿಕೆ ಹಾಗು ಸೇವೆಗಳನ್ನು ಬಲಪಡಿಸಬೇಕು. ಕೆಲಸದ ಅವಧಿಯನ್ನು ವಾರಕ್ಕೆ ಗರಿಷ್ಠ 36 ಗಂಟೆಗಳು ಹಾಗೂ ದಿನದ ಪಾಳಿಯನ್ನು 6 ಗಂಟೆಗಳಿಗೆ ಮಿತಿಗೊಳಿಸಬೇಕು. ಉದ್ಯೋಗ ಅವಕಾಶಗಳನ್ನು ಸೃಷ್ಟಿಸಲು ಗಮನ ನೀಡಬೇಕು. ನಮ್ಮ ಸಂವಿಧಾನದ ಪರಿಚ್ಛೇದ 39 (ಡಿ) ನಲ್ಲಿ ಪ್ರತಿಪಾದಿಸಿರುವ ಸಮಾನ ಕೆಲಸಕ್ಕೆ ಸಮಾನ ವೇತನವನ್ನು ಖಾತ್ರಿಪಡಿಸಬೇಕು. ಕಡಿಮೆ ವೇತನ ನೀಡುತ್ತಾ ಗುತ್ತಿಗೆ, ಹೊರಗುತ್ತಿಗೆ ಹಾಗೂ ಹಂಗಾಮಿ ನೌಕರರ ಮೇಲೆ ನಡೆಯುತ್ತಿರುವ ಶೋಷಣೆಯನ್ನು ಕೊನೆಗಾಣಿಸಬೇಕು ಎಂದು ಆಗ್ರಹಿಸಿದರು.
ಸ್ಥಳೀಯ ಸಂಸ್ಥೆಗಳು ಹಾಗೂ ಎಲ್ಲ ಕೈಗಾರಿಕೆಗಳಲ್ಲಿನ ಗುತ್ತಿಗೆ ಹಾಗು ತಾತ್ಕಾಲಿಕ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಲು ತಮಿಳುನಾಡು ಮತ್ತು ಆಸ್ಸಾಂ ಮಾದರಿಯಲ್ಲಿ ಕಾನೂನು ಜಾರಿಗೆ ತರಬೇಕು. ಇಎಸ್‌ಐ, ಇಪಿಎಫ್, ಗ್ರಾಚ್ಯುಟಿ, ಬೋನಸ್ ಕಾಯ್ದೆಯಲ್ಲಿ ವಿಧಿಸಲಾದ ಎಲ್ಲಾ ವೇತನ ಮಿತಿಗಳನ್ನು ತೆರೆವುಗೊಳಿಸಬೇಕು. ಈ ಸವಲತ್ತುಗಳನ್ನು ಎಲ್ಲಾ ಕಾರ್ಮಿಕರಿಗೂ ವಿಸ್ತರಿಸಬೇಕು. ಪ್ರತಿ ಕೈಗಾರಿಕಾ ವಲಯ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ ಇಎಸ್‌ಐ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವ ಮೂಲಕ ಉಚಿತ ವೈದ್ಯಕೀಯ ಸೌಲಭ್ಯವನ್ನು ಕಲ್ಪಿಸಬೇಕು ಎಂದರು.
ಎನ್‌ಪಿಎಸ್ ರದ್ದುಗೊಳಿಸಿ ಓಪಿಎಸ್ ಮರುಸ್ಥಾಪಿಸಿ ಇಪಿಎಸ್ ಪಿಂಚಣಿದಾರರಿಗೆ ಕನಿಷ್ಠ 9,000 ರೂ. ಪಿಂಚಣಿಯನ್ನು ಖಚಿತಪಡಿಸಬೇಕು. ಪ್ರತಿ ಜಿಲ್ಲಾ ಮಟ್ಟದಲ್ಲಿ ಕಾರ್ಮಿಕ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ದೇಶದ ಎಲ್ಲಾ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ರಚಿಸಲಾಗಿರುವ ಸಾಮಾಜಿಕ ಭದ್ರತಾ ಮಂಡಳಿಯನ್ನು ಬಲಪಡಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿ ಮಾಡುತ್ತಿರುವ ವಿವಿಧ ವಸತಿ ಯೋಜನೆಗಳನ್ನು ಬಳಸಿಕೊಂಡು ರಾಜ್ಯದಲ್ಲಿರುವ ಎಲ್ಲಾ ಅಸಂಘಟಿತ ಕಾರ್ಮಿಕರಿಗೂ ನಿರ್ದಿಷ್ಟ ಕಾಲಮಿತಿಯೊಳಗೆ ವಸತಿ ಯೋಜನೆಯನ್ನು ಜಾರಿಗೊಳಿಸಬೇಕು. ಬಿಡಿ ಕಾರ್ಮಿಕರಿಗೆ ಪರ್ಯಾಯ ಉದ್ಯೋಗ, ಪರಿಹಾರ ಯೋಜನೆ ರೂಪಿಸಬೇಕು. ವಿದ್ಯಾರ್ಥಿ ವೇತನ ಹಾಗೂ ಇತರೆ ಕಲ್ಯಾಣ ಯೋಜನೆಗಳ ಸಮರ್ಪಕ ಜಾರಿಗೆ ಅನುವಾಗುವಂತೆ ಕೇಂದ್ರ ಸರ್ಕಾರವು ಜಿಎಸ್‌ಟಿಯಿಂದ ಕಲ್ಯಾಣ ನಿಧಿಗೆ ಪಾಲು ನೀಡಬೇಕು ಎಂದು ಹೇಳಿದರು.
ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ವಾರ್ಷಿಕ 200 ದಿನಗಳು ಹಾಗೂ ದಿನಕ್ಕೆ 700 ರೂ. ವೇತನ ನೀಡಬೇಕು. ಕಳೆದ ಬಜೆಟ್‌ಗಳಲ್ಲಿ ಕಡಿತಗೊಳಿಸಿರುವ ಅನುದಾನಗಳನ್ನು ಮರುಪಾವತಿ ಮಾಡುವುದು ಹಾಗೂ ಯೋಗ್ಯ ಅನುದಾನವನ್ನು ಕೊಡುವ ಮೂಲಕ ಈ ಯೋಜನೆಗಳನ್ನು ಸ್ಥಿರಗೊಳಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನವನ್ನು ಕ್ರಮಬದ್ಧವಾಗಿ 90:10 ಎಂಬ ಅನುಪಾತದೊಂದಿಗೆ ನೀಡಬೇಕು ಹಾಗೂ ಆಹಾರ, ಆರೋಗ್ಯ, ಶಿಕ್ಷಣ ಮತ್ತು ಪೌಷ್ಠಿಕ ಆಹಾರಕ್ಕಾಗಿರುವ ಯೋಜನೆಗಳಾದ ಐಸಿಡಿಎಸ್, ಎಂಡಿಎಂ, ಎನ್‌ಎಚ್‌ಎಂ, ಐಸಿಪಿಎಸ್, ಎಸ್‌ಎಸ್‌ಎ, ಎಂಎನ್‌ಆರ್‌ಇಜಿ ಮುಂತಾದ ಯೋಜನೆಗಳನ್ನು ಕಾಯಂ ಮಾಡುವ ಮುಖಾಂತರ ಈ ಹಕ್ಕುಗಳನ್ನು ಸಾರ್ವತ್ರಿಕಗೊಳಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯು ತಾಲೂಕು ಕಾರ್ಯದರ್ಶಿ ಜಯಂತಿ, ಮುಖಂಡರಾದ ಅರವಿಂದ್, ಮಂಜುಳಾ, ಮೀನಾಕ್ಷಿ, ಗಾಯಿತ್ರಿ, ಗೀತಾ, ಕವಿತಾ ಇತರರು ಭಾಗವಹಿಸಿದ್ದರು.