

ಬಳ್ಳಾರಿ : ಎನ್‌ಪಿಎಸ್, ಯುಪಿಎಸ್ ರದ್ದುಪಡಿಸಿ ಹಳೆಯ ನಿಶ್ಚಿತ ಪಿಂಚಣಿ ಮರುಸ್ಥಾಪಿಸಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಜಿಲ್ಲಾ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟವು ಗುರುವಾರ ಮನವಿ ಸಲ್ಲಿಸಿತು.
ರಾಜ್ಯ ಹಾಗೂ ಕೇಂದ್ರ ಸರ್ಕಾರದಲ್ಲಿರುವ ಖಾಲಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಬೇಕು. ಮುಂದಿನ ದಿನಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ನೇಮಕಾತಿಯನ್ನು ಕೈ ಬಿಡಬೇಕು. ಎಲ್ಲ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆಯನ್ನು ಒದಗಿಸಬೇಕು. ಕೇಂದ್ರ ಸರ್ಕಾರ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣಗೊಳಿಸುವುದನ್ನು ನಿಲ್ಲಿಸಬೇಕು. ಪ್ರತಿ ಐದು ವರ್ಷಗಳಿಗೊಮ್ಮೆ ನಿಯಮಿತವಾಗಿ ವೇತನ ಪರಿಷ್ಕರಣೆ ಮಾಡಬೇಕು. ಕೂಡಲೇ 18 ತಿಂಗಳ ತುಟ್ಟಿ ಭತ್ಯೆ ಬಿಡುಗೊಳಿಸಬೇಕು. ನೌಕರ ಮತ್ತು ಪಿಂಚಣಿದಾರರಿಗೆ ನಗದು ರಹಿತ ಆರೋಗ್ಯ ವಿಮಾ ಯೋಜನೆ ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಈಡೇರಿಸುವಂತೆ ಆಗ್ರಹಿಸಿದರು.