ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ 6,200 ಕೋಟಿ ರೂ. ವ್ಯಯ

Published on

ಬಳ್ಳಾರಿ : ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಬಳ್ಳಾರಿ-ಹೊಸಪೇಟೆ ಭಾಗದಲ್ಲಿ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಇದಕ್ಕಾಗಿ 6,200 ಕೋಟಿ ರೂ. ವ್ಯಯಿಸಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು.
ನಗರದ ನೂತನ ಡಿಸಿ ಕಚೇರಿ ಭವನದಲ್ಲಿ ಕಚೇರಿ ‌ಸಭಾಂಗಣದಲ್ಲಿ ನಡೆದ ಜಿಲ್ಲೆಯ ವಿವಿಧ ರೈಲ್ವೆ ಯೋಜನೆಗಳಿಗೆ ಸಂಬಂಧಿಸಿದಂತೆ ರೈಲ್ವೆ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಬಳ್ಳಾರಿ-ಚಿಕ್ಕಜಾಜೂರು ಮಾರ್ಗದ 185 ಕಿ.ಮೀ ಉದ್ದದ ರೈಲ್ವೆ ಹಳಿ ಡಬ್ಲಿಂಗ್ ಕಾರ್ಯಕ್ಕೆ 3,080 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಪ್ರಸ್ತಕ ವರ್ಷದಲ್ಲಿ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, ಇನ್ನೆರಡು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು. ಅದೇರೀತಿಯಾಗಿ ಸ್ವಾಮಿಹಳ್ಳಿ-ರಾಯದುರ್ಗ ಮಾರ್ಗದ 52 ಕಿ.ಮೀ ಉದ್ದದ ರೈಲ್ವೆ ಹಳಿ ಡಬ್ಲಿಂಗ್ ಕಾರ್ಯಕ್ಕೆ ತಾಂತ್ರಿಕ ಪರಿಶೀಲನೆ ನಡೆಸಲಾಗಿದೆ. ನಂತರ ಡಿಪಿಆರ್ ಸಿದ್ದಪಡಿಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಒಟ್ಟು 21 ರೈಲ್ವೆ ಯೋಜನೆಗಳು ನಡೆಯುತ್ತಿದ್ದು, ಇದಕ್ಕಾಗಿ 43 ಸಾವಿರ ಕೋಟಿ ವೆಚ್ಚ ಮಾಡಲಾಗುತ್ತದೆ. ಈ ಎಲ್ಲ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ರಾಜ್ಯವನ್ನು ರೈಲ್ವೆ ಸೌಕರ್ಯ ಹೊಂದಿದ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ದೇಶದ 24 ರಾಜ್ಯಗಳ 303 ಜಿಲ್ಲೆಗಳಲ್ಲಿ 103 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ರಾಜ್ಯದಲ್ಲಿ 10 ವಂದೇ ಭಾರತ್ ಕಾರ್ಯಾಚರಣೆ ನಡೆಸುತ್ತಿವೆ. ವಂದೇ ಭಾರತ್ ರೈಲು ಬಡವರು, ಮಧ್ಯಮ ವರ್ಗದವರಿಗೆ ತುರ್ತು ಪ್ರಯಾಣಕ್ಕಾಗಿ ಕೈಗೆಟಕುವ ದರದಲ್ಲಿ ಟಿಕೆಟ್ ಇದ್ದು, ನೀಡಲಾಗಿರುವ ಸೌಲಭ್ಯಗಳ ಬಗ್ಗೆ ಅರಿಯಲು ಪ್ರಯಾಣಿಸಬೇಕು ಎಂದು ತಿಳಿಸಿದ ಸಚಿವರು, ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ 49 ಸಾವಿರ ಕಿ.ಮೀ ಉದ್ದದ ರೈಲ್ವೆ ಹಳಿ ಡಬ್ಲಿಂಗ್ ಕಾರ್ಯ ಮಾಡಲಾಗಿದೆ. ಶೇ.27 ರಷ್ಟು ಇದ್ದ ರೈಲ್ವೆ ಮಾರ್ಗಗಳ ವಿದ್ಯುದೀಕರಣವನ್ನು ಶೇ.98 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.
ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು, ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು, ಮುಂದಿನ ದಿನಗಳಲ್ಲಿಯೂ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದರು.
ಸಂಸದ ಈ.‌ತುಕಾರಾಮ್ , ಶಾಸಕ ನಾರಾ ಭರತ ರೆಡ್ಡಿ ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net