

ಕಂಪ್ಲಿ: ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಬಳ್ಳಾರಿ ಲೋಕಾಯುಕ್ತ ನಿರೀಕ್ಷಕ ನಾಗರೆಡ್ಡಿ ಹೇಳಿದರು.
ಪಟ್ಟಣದ ತಹಸಿಲ್ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಸಮಾರಂಭದಲ್ಲಿ ಗುರುವಾರ ಮಾತನಾಡಿದರು. ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲು ಮುಂದಾಗಬೇಕು. ಕಾನೂನಾತ್ಮಕ ತೊಡಕುಗಳಿದ್ದಲ್ಲಿ ಅವರಿಗೆ ತಿಳಿಸಿ ಹೇಳಿ ಜಾಗೃತಿ ಮೂಡಿಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ವೃತ್ತಿ ನೈತಿಕತೆ ಕಾಪಾಡಿಕೊಳ್ಳಬೇಕು. ಕಡತಗಳ ವಿಲೇವಾರಿಯಲ್ಲಿ ನಿರ್ಲಕ್ಷ್ಯ ಸಲ್ಲದು. ಪಾರದರ್ಶಕವಾಗಿ ಸಾರ್ವಜನಿಕರ ಕೆಲಸ ಮಾಡಿಕೊಡಬೇಕು ಎಂದರು.
ತಾಪಂಗೆ ಸಂಬಂಧಿಸಿದ ಮೂರು, ಅಬಕಾರಿ, ಸಿಡಿಪಿಒ, ಗಣಿ ಮತ್ತು ಭೂವಿಜ್ಞಾನ, ಪುರಸಭೆ, ಆರೋಗ್ಯ ಇಲಾಖೆಗೆ ಸಂಬಂಧಿಸಿದ ತಲಾ ಒಂದು ಅರ್ಜಿ ಸ್ವೀಕರಿಸಲಾಯಿತು. ತಹಸೀಲ್ದಾರ್ ಎಸ್.ಶಿವರಾಜ, ತಾಪಂ ಇಒ ಆರ್.ಕೆ.ಶ್ರೀಕುಮಾರ್, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.