

ಬೇಲೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಮೂಲಕ ಬುಧವಾರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಮನವಿ ಪತ್ರ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಆಶಾ ಕಾರ್ಯಕರ್ತೆಯರ ಸಂಘದ ತಾಲೂಕು ಅಧ್ಯಕ್ಷೆ ತಾಹಿರಾ ಬಾನು, 16 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರೂ ಕೆಲಸಕ್ಕೆ ಸರಿಯಾದ ವೇತನ ನೀಡುತ್ತಿಲ್ಲ. ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಿದಾಗ ಮುಖ್ಯಮಂತ್ರಿಯವರು ಬಂದು 10 ಸಾವಿರ ರೂ. ನೀಡಲಾಗುವುದು ಎಂದು ಭರವಸೆ ನೀಡಿದ್ದರು. ಇದರೊಂದಿಗೆ ಮತ್ತೆ 1 ಸಾವಿರ ರೂ. ಹೆಚ್ಚು ಮಾಡಿದ್ದೇವೆ ಎಂದಿದ್ದರೂ ಯಾವುದನ್ನು ಕೊಡದೆ ವಂಚಿಸುತ್ತಿದ್ದಾರೆ. ಆದ್ದರಿಂದ ಆಶಾ ಕಾರ್ಯಕರ್ತೆಯರಿಗೆ 11 ಸಾವಿರ ರೂ. ವೇತನ ನೀಡಲು ಸರ್ಕಾರ ಮುಂದಾಗಬೇಕು ಎಂದರು.
ಮನವಿ ಸ್ವೀಕರಿಸಿ ಮಾತನಾಡಿದ ತಹಸೀಲ್ದಾರ್ ಶ್ರೀಧರ್ ಕಂಕನವಾಡಿ, ಮನವಿಯನ್ನು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಕಳುಹಿಸಿಕೊಡಲಾಗುವುದು ಎಂದರು.
ಆಶಾ ಕಾರ್ಯಕರ್ತೆಯರಾದ ಸುಮಿತ್ರಾ, ಲತಾ, ಪುಷ್ಪಾ, ದೇವಿರಮ್ಮ, ಸುಶೀಲಮ್ಮ, ಪರಿಮಳಾ, ಪ್ರೇಮಾ, ಅನಿತಾ ಇತರರಿದ್ದರು.