ವೇತನಕ್ಕೆ ಆಗ್ರಹಿಸಿ ನರೇಗಾ ನೌಕರರ ಪ್ರತಿಭಟನೆ

mysore
Published on

 ಮೈಸೂರು: ಬಾಕಿ ಉಳಿದಿರುವ ಏಳು ತಿಂಗಳ ವೇತನ ಬಿಡುಗಡೆಗೆ ಒತ್ತಾಯಿಸಿ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ನೌಕಕರು ಜಿಲ್ಲಾ ಪಂಚಾಯಿತಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಉದ್ಯೋಗ ಖಾತ್ರಿಯ ಅನುಷ್ಠಾನಕ್ಕಾಗಿ ದುಡಿಯುತ್ತಿರುವ ನೌಕರರಿಗೆ ಕಳೆದ 2024ರ ನವೆಂಬರ್‌ನಿಂದ ವೇತನ ಬಿಡುಗಡೆಯಾಗಿಲ್ಲ. ಜೀವನ ಹಾಗೂ ಕುಟುಂಬ ನಿರ್ವಹಣೆ ಅತ್ಯಂತ ಕಷ್ಟಕರವಾಗಿದ್ದು, ಕೂಡಲೇ ವೇತನ ಪಾವತಿಸುವಂತೆ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಜಿಲ್ಲಾ ಸಂಘದಿಂದ ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.

ವೇತನ ಸ್ಥಗಿತಗೊಂಡಿರುವುದರಿಂದ ನೌಕರರು ಸಾಲ ಮಾಡಿ ಜೀವನ ಸಾಗಿಸುವಂತಾಗಿದೆ. ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಹಂತದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಮಗೆ ವೇತನವಿಲ್ಲದೆ ಬದುಕು ಸಾಗಿಸುವುದು ಕಷ್ಟಕರವಾಗಿದೆ. ಮಕ್ಕಳ ಶಾಲಾ ಪ್ರವೇಶಾತಿ ಶುಲ್ಕ, ವಯಸ್ಸಾದ ತಂದೆ-ತಾಯಿಗಳ ಆರೋಗ್ಯ ಸಮಸ್ಯೆಗೆ ಆಸ್ಪತ್ರೆ ವೆಚ್ಚ, ನಿತ್ಯ ಖರ್ಚುಗಳನ್ನು ನಿಭಾಯಿಸುವುದು ಸವಾಲಾಗಿದೆ ಎಂದು ಅಳಲು ತೋಡಿಕೊಂಡರು.

ಮಹಾತ್ಮ ಗಾಂಧಿ ನರೇಗಾ ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ಗೌರವಾಧ್ಯಕ್ಷ ಲೋಕೇಶ್, ಜಿಲ್ಲಾ ಪಂಚಾಯಿತಿ ಎಡಿಪಿಸಿ, ಐಇಸಿ ಸಂಯೋಜಕರು, ತಾಂತ್ರಿಕ ಸಂಯೋಜಕರು, ಎಂಐಎಸ್ ಸಂಯೋಜಕರು, ತಾಂತ್ರಿಕ ಸಹಾಯಕ ಇಂಜಿನಿಯರ್‌ಗಳು, ಲೆಕ್ಕ ಸಹಾಯಕರು, ಬಿಎಫ್‌ಟಿ, ಗ್ರಾಮ ಕಾಯಕ ಮಿತ್ರರು, ಕಂಪ್ಯೂಟರ್ ಆಪರೇಟರ್ ಸೇರಿದಂತೆ ಎಲ್ಲ ನರೇಗಾ ನೌಕರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net