ವೈಜ್ಞಾನಿಕವಾಗಿ ಭೂ ಕುಸಿತ ತಡೆಯಲು ಕ್ರಮ; ಡಿಸಿ ಲತಾಕುಮಾರಿ ಹೇಳಿಕೆ

25_HSN_07
Published on

ಹಾಸನ: ರಾಷ್ಟ್ರೀಯ ಹೆದ್ದಾರಿ -75ರಲ್ಲಿ ಸಕಲೇಶಪುರ ವ್ಯಾಪ್ತಿಯ ರಸ್ತೆ ಬದಿಯಲ್ಲಿ ಭೂ ಕುಸಿತ ಉಂಟಾಗಬಹುದಾದ 12 ಸ್ಥಳಗಳನ್ನು ಗುರುತಿಸಲಾಗಿದ್ದು, ವೈಜ್ಞಾನಿಕವಾಗಿ ಭೂ ಕುಸಿತ ತಡೆಯಲು ಈಗಾಗಲೇ ವರದಿ ಸಿದ್ಧಪಡಿಸಲಾಗಿದೆ. ಮಳೆಗಾಲ ಮುಗಿದ ನಂತರ ಕಾಮಗಾರಿ ಪ್ರಾರಂಭಿಸಿಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರು ತಿಳಿಸಿದರು.

ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆಗೋಡೆ ಕುಸಿತವಾಗಿರುವ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ಈಗಾಗಲೇ ಮಳೆಗಾಲ ಎದುರಿಸಲು ಸಂಬಂಧಿಸಿದಂತೆ ಸಭೆಯನ್ನು ನಡೆಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಕಂದಾಯ ಹಾಗೂ ಮತ್ತಿತರರ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಶಾಲಾ ಶಿಕ್ಷಣ ಇಲಾಖೆಯೂ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಕಳೆದ 2 ದಿನ ರಜೆ ನೀಡಲಾಗಿತ್ತು ಎಂದ ಅವರು, ಜಿಲ್ಲಾ ವಿಪತ್ತು ನಿರ್ವಹಣಾ ಘಟಕ ಅತ್ಯಂತ ಕ್ರಿಯಾಶೀಲವಾಗಿರುವಂತೆ ಹಾಗೂ ಎಂತಹ ಗಂಭೀರ ಪರಿಸ್ಥಿತಿಯನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಈ ವೇಳೆಯಲ್ಲಿ ಉಪವಿಭಾಗಾಧಿಕಾರಿ ಶೃತಿ ಹಾಗೂ ತಹಸೀಲ್ದಾರ್ ಅರವಿಂದ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net