

ಚಿತ್ರದುರ್ಗ: ಕಾನೂನು ಸುವ್ಯವಸ್ಥೆ ಕಾಪಾಡುವ, ಸಾರ್ವಜನಿಕರ ಹಿತದೃಷ್ಟಿಯಿಂದ ವಿಶ್ವ ಹಿಂದು ಪರಿಷದ್‌ನ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರಿಗೆ ಸೆ. 22ರಿಂದ ಅ. 7ರ ವರೆಗೂ ಜಿಲ್ಲಾ ಪ್ರವೇಶವನ್ನು ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಶನಿವಾರ ಆದೇಶ ಹೊರಡಿಸಿದ್ದಾರೆ.
ಹಿರಿಯೂರು ನಗರದಲ್ಲಿ ವಿಶ್ವ ಹಿಂದು ಪರಿಷದ್, ಬಜರಂಗದಳದಿಂದ ಆಯೋಜಿಸಿರುವ ವಿಶ್ವ ಹಿಂದು ಮಹಾಗಣಪತಿ ವಿಸರ್ಜನಾ ಮೆರವಣಿಗೆಗೂ ಮುನ್ನ ಹಾಗೂ ಚಿತ್ರದುರ್ಗದ ಹಿಂದು ಮಹಾಗಣಪತಿ ವೇದಿಕೆ ಕಾರ್ಯಕ್ರಮದಲ್ಲಿ ಸೆ. 22ರಂದು ಶರಣ್ ಪಂಪ್ ವೆಲ್ ಅವರ ದಿಕ್ಕೂಚಿ ಭಾಷಣ ನಿಗದಿಯಾಗಿತ್ತು. ಆದರೆ, ಅವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಅನೇಕ ಪ್ರಕರಣಗಳಿರುವ ಹಾಗೂ ಶೋಭಾಯಾತ್ರೆಯಲ್ಲಿ ಲಕ್ಷಾಂತರ ಮಂದಿ ಸೇರುವ ಕಾರಣ ಮುಂದಿಟ್ಟುಕೊಂಡು ಶಾಂತಿ-ಸುವ್ಯವಸ್ಥೆ ದೃಷ್ಟಿಯಿಂದ ನಿರ್ಬಂಧ ವಿಧಿಸಿರುವುದಾಗಿ ತಿಳಿಸಿದ್ದಾರೆ.