ಶಾಶ್ವತ ಪರಿಹಾರ ಕಲ್ಪಿಸಲು ಕ್ರಮಕೈಗೊಳ್ಳಿ

18GDG- 20
Published on

ಗದಗ: ಜಿಲ್ಲೆಯಲ್ಲಿ ಪ್ರತಿವರ್ಷ ಪ್ರವಾಹ ಉಂಟಾಗುತ್ತಿದ್ದು, ಮಲಪ್ರಭಾ, ಬೆಣ್ಣೆಹಳ್ಳ ಹಾಗೂ ತುಂಗಭದ್ರಾ ನದಿ ಪಾತ್ರದ ಜಿಲ್ಲೆಯ ಜನರು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ. ಹೀಗಾಗಿ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ ಬದಲು ಶಾಶ್ವತ ಪರಿಹಾರ ಕಲ್ಪಿಸಲು ಕ್ರಮಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಸುಂದರೇಶಬಾಬು ಸೂಚಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳ ವಿಡಿಯೋ ಕಾನ್ಪರೆನ್ಸ್ ಸಭೆಯಲ್ಲಿ ಅವರು ಮಾತನಾಡಿದರು.

ಮುಂಬರುವ ವರ್ಷಗಳಲ್ಲಿ ಜಿಲ್ಲೆಯಲ್ಲಿ ಅಧಿಕ ಪ್ರಮಾಣದ ಮಳೆ ಸುರಿದರೂ, ಜಲಾಶಯಗಳಿಂದ ನೀರು ಬಿಟ್ಟರೂ ಕಾಳಜಿ ಕೇಂದ್ರ ಹಾಗೂ ತಾತ್ಕಾಲಿಕ ಶೆಡ್ ನಿರ್ವಿುಸುವ ಸಂದರ್ಭ ಎದುರಾಗದಂತೆ ಶಾಶ್ವತ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು ಎಂದರು.

ನೆರೆ ಹಾವಳಿಗೆ ತುತ್ತಾಗಿರುವ ಜನರು ಹಾಗೂ ಜಾನುವಾರುಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಸಂತ್ರಸ್ತರ ಕಾಳಜಿ ಕೇಂದ್ರಗಳಲ್ಲಿ ಯಾವುದೇ ಕೊರತೆ ಆಗದಂತೆ ನಿಗಾವಹಿಸಬೇಕು. ಪದೇ ಪದೆ ನೆರೆ ಹಾವಳಿಗೆ ತುತ್ತಾಗುತ್ತಿರುವ ಗ್ರಾಮದ ಜನರಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸೂಕ್ತವಾದ ಜಾಗ ಗುರುತಿಸಬೇಕು. ಈಗಾಗಲೇ ಸಂತ್ರಸ್ತರಿಗೆ ನಿರ್ವಿುಸಲಾಗಿದ್ದ ಮನೆಗಳ ಹಕ್ಕುಪತ್ರಗಳನ್ನು ಕೆಲವರಿಗೆ ವಿತರಿಸಲಾಗಿದ್ದು, ಇನ್ನುಳಿದವರಿಗೂ ಮನೆಗಳ ಹಕ್ಕುಪತ್ರ ನೀಡಬೇಕು ಎಂದು ಸೂಚಿಸಿದರು.

ನಿರ್ಮಾಣ ಹಂತದಲ್ಲಿರುವ ಮನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಕಾರ್ಯವನ್ನು ಪ್ರಥಮಾದ್ಯತೆ ಮೇರೆಗೆ ಕೈಗೊಳ್ಳಬೇಕು. ಯಾವುದೇ ಪ್ರಾಣಹಾನಿ ಸಂಭವಿಸದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಹೇಳಿದರು.

ಶಿಥಿಲಾವಸ್ಥೆಯ ಮನೆಗಳಲ್ಲಿಯೇ ವಾಸ ಮಾಡುತ್ತಿರುವವರನ್ನು ಗುರುತಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳಿಸಬೇಕು. ಚರಂಡಿಗಳನ್ನು ಸ್ವಚ್ಛಗೊಳಿಸುವ ಮೂಲಕ ಸರಾಗವಾಗಿ ನೀರು ಹರಿದು ಹೋಗುವಂತೆ ನೋಡಿಕೊಳ್ಳಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಎಂ., ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರುದ್ರೇಶ ಎಸ್.ಎನ್., ಗದಗ ತಹಸೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ, ತಾ.ಪಂ. ಇಒ ಎಚ್.ಎಸ್. ಜಿನಗಾ, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net