ಶಾಸಕ ಸತೀಶ ತಮ್ಮ ಹೇಳಿಕೆ ಹಿಂಪಡೆಯಲಿ

9-33
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ನಿಪ್ಪಾಣಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಜಯವಂತ ಬಾಟಲೆ, ನೀತಾ ಬಾಗಡೆ, ಪ್ರಣವ ಮಾನವಿ, ಪವನ ಪಾಟೀಲ ಇತರರಿದ್ದರು.
Published on

ನಿಪ್ಪಾಣಿ, ಬೆಳಗಾವಿ: ಶಾಸಕ ಸತೀಶ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ ಖಂಡಿಸಿ ಸಚಿವೆ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಇಲ್ಲಿನ ಬಸ್ ನಿಲ್ದಾಣದಿಂದ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಿದ ಕಾರ್ಯಕರ್ತರು ಹಿಂದು ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಸತೀಶ ಜಾರಕಿಹೊಳಿ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿ, ಜಾರಕಿಹೊಳಿ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.

ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಹಿಂದು ನಾಡಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನಮ್ಮ ಭಾವನೆಗೆ ಅವಮಾನ ಮಾಡಿರುವುದು ಸರಿಯಲ್ಲ. ಡಾ.ಅಂಬೇಡ್ಕರ್ ರಚನೆ ಮಾಡಿರುವ ಸಂವಿಧಾನ ಮೇಲೆ ನಾವೆಲ್ಲರೂ ನಡೆಯುತ್ತಿದ್ದೇವೆ. ಅನೇಕತೆಯಲ್ಲಿ ಏಕತೆ ಬಿಂಬಿಸುವ ಏಕೈಕ ರಾಷ್ಟ್ರ ಭಾರತ. ಇಂತಹ ದೇಶದಲ್ಲಿ ಜಾತಿ ಬೇಧವಿಲ್ಲ. ಆದರೆ, ಸತೀಶ ಜಾರಕಿಹೊಳಿ ಹಿಂದು ಧರ್ಮ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಯಾರೂ ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಶಿವಾಜಿ ಮತ್ತು ಸಂಭಾಜಿ ಮಹಾರಾಜರ ಬಗ್ಗೆ ಮಾತನಾಡಬೇಕಾದರೆ ಅವರ ಪೂರ್ವಾಪರ ಇತಿಹಾಸ ತಿಳಿದು ಮಾತನಾಡಬೇಕು. ಜನರಿಗೆ ಒಳ್ಳೆಯ ಸಂದೇಶ ಕೊಡುವುದು ಬಿಟ್ಟು ಜನರಲ್ಲಿ ತಪ್ಪು ಸಂದೇಶ ನೀಡಿರುವುದು ಖಂಡನೀಯ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಜನರಿಗೆ ತಪ್ಪು ಮಾಹಿತಿ ನೀಡುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅವರ ಹೇಳಿಕೆ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

ಸಂಸದ ಅಣ್ಣಾಸಾಹೇಬ ಜೊಲ್ಲೆ, ನಗರಸಭೆ ಅಧ್ಯಕ್ಷ ಜಯವಂತ ಬಾಟಲೆ, ಉಪಾಧ್ಯಕ್ಷ ನೀತಾ ಬಾಗಡೆ, ಬಿಜೆಪಿ ನಗರ ಘಟಕ ಅಧ್ಯಕ್ಷ ಪ್ರಣವ ಮಾನವಿ, ಗ್ರಾಮೀಣ ಘಟಕದ ಅಧ್ಯಕ್ಷ ಪವನ ಪಾಟೀಲ, ಭಂಡಾ ಘೋರ್ಪಡೆ, ಅಭಿಜೀತ ಮುದುಕುಡೆ, ಕಾವೇರಿ ಮಿರ್ಜೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net