

ಹಾಸನ: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೂನ್ 3 ರಂದು ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಮೇ 9 ರಂದು ಚುನಾವಣೆ ಅಧಿಸೂಚನೆ ಪ್ರಕಟವಾಗಲಿದ್ದು, ಮೇ 16ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ, ಮೇ 17 ನಾಮಪತ್ರಗಳ ಪರಿಶೀಲನೆ, ಮೇ 20 ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ ಎಂದು ಹೇಳಿದರು.
ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಜೂ 6 ರಂದು ಮತಗಳ ಏಣಿಕೆ ನಡೆಯಲಿದ್ದು, ಜೂನ್ 12 ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ. ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ. ಅರ್ಜಿಗಳನ್ನು ಸ್ವೀಕರಿಸಲು ಮೇ 6 ಸಂಜೆ 5.30 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ನಮೂನೆ-19 ರಲ್ಲಿ ಅರ್ಜಿಗಳನ್ನು ಆಯಾ ತಾಲೂಕು ಕಚೇರಿಗಳಲ್ಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.