

ಬಾಗಲಕೋಟೆ: ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕ ಡಾ.ಎಚ್.ಪಿ.ಮಹೇಶ್ವರಪ್ಪ ಹೇಳಿದರು.
ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಭಾಭವನದಲ್ಲಿ ಗುರುವಾರ ಹಮ್ಮಿಕೊಂಡ ಸರಳ ವಿಜ್ಞಾನ ಪ್ರಯೋಗಾಲಯ ಎಂಬ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರು ಕಾರ್ಯಾಗಾರದ ಉಪಯೋಗವನ್ನು ಪಡೆದುಕೊಂಡು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವಂತೆ ಕರೆ ನೀಡಿದರು.
ಅಜೀಂ ಪ್ರೇಮ್‌ಜಿ ಫೌಂಡೇಶನ್‌ನ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಕಾಂತ ಹಾಗೂ ಅರುಣಕುಮಾರ ಶಿಕ್ಷಕರಿಗಾಗಿ ವಿವಿಧ ಚಟುವಟಿಕೆಗಳನ್ನು ನೀಡುವುದರ ಮೂಲಕ ಶಾಲಾ ವಾತಾವರಣದಲ್ಲಿ ಸರಳ ವಿಜ್ಞಾನ ಪ್ರಯೋಗಾಲಯವನ್ನು ನಿರ್ಮಿಸುವ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ವಿಜ್ಞಾನ ಶಿಕ್ಷಕರು ಎಲ್ಲ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ, ತಾವು ಮಾಡಿದ ಚಟುವಟಿಕೆಗಳನ್ನು ವಿದ್ಯಾರ್ಥಿಗಳಿಗೆ ಸರಳ ರೀತಿಯಲ್ಲಿ ತಿಳಿಸುವ ಬಗ್ಗೆ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಚರ್ಚಿಸುವ ಮೂಲಕ ವಿಸ್ತಾರವಾದ ಸಮಾಲೋಚನೆಯನ್ನು ನಡೆಸಿದರು.
ಶಿಕ್ಷಕರಿಗೆ ಕೇಂದ್ರದಲ್ಲಿ ಸ್ಥಾಪಿಸಿರುವ ಒಳಾಂಗಣ ಮತ್ತು ಹೊರಾಂಗಣ ವಿಜ್ಞಾನ ಪ್ರದರ್ಶಿಕೆಗಳ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕ್ಯೂರೇಟರ್ ಈರಣ್ಣಾ ಬುಳ್ಳಾ, ತಾಂತ್ರಿಕ ಸಹಾಯಕ ಆಸೀಫ ಬಾಗವಾನ, ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಾಯಕ ಗಂಗನಗೌಡ ಪಾಟೀಲ ಸೇರಿದಂತೆ ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಿಬ್ಬಂದಿಗಳು ಉಪಸ್ಥಿತರಿದ್ದರು.