

ಮದ್ದೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಮೂಲ ಸೌಕರ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಶಾಸಕ ಡಿ.ಸಿ.ತಮ್ಮಣ್ಣ ಹೇಳಿದರು.
ತಾಲೂಕಿನ ಸೋಮನಹಳ್ಳಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಬ್ಯಾಡರಹಳ್ಳಿ ಹಾಗೂ ಕೊಕ್ಕರೆ ಬೆಳ್ಳೂರು ಗ್ರಾಮಗಳಲ್ಲಿ ಸರ್ಕಾರಿ ಶಾಲೆಗಳಿಗೆ ನೂತನ ಕಟ್ಟಡಗಳ ಕಾಮಗಾರಿ ಮತ್ತು ಮಾದನಾಯಕನಹಳ್ಳಿ, ಕೊಕ್ಕರೆಬೆಳ್ಳೂರು, ರುದ್ರಾಕ್ಷಿಪುರ ಗ್ರಾಮಗಳಲ್ಲಿ 6 ಕೋಟಿ ರೂ. ವಿಶೇಷ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಎಲ್ಲ ರೀತಿಯ ಸವಲತ್ತುಗಳನ್ನು ವಿದ್ಯಾರ್ಥಿಗಳಿಗೆ ದೊರಕಿಸಿಕೊಡಲಾಗಿದೆ ಹಾಗೂ ಗ್ರಾಮೀಣ ಭಾಗದಲ್ಲಿ ಜನರ ಅವಶ್ಯಕತೆಗೆ ಅನುಗುಣವಾಗಿ ಸಮುದಾಯ ಭವನಗಳನ್ನು ನಿರ್ಮಾಣ ಮಾಡುವ ಮೂಲಕ ಗ್ರಾಮೀಣ ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ ಎಂದರು.
ಜೆಡಿಎಸ್ ತಾಲೂಕು ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಮುಖಂಡರಾದ ಬ್ಯಾಡರಹಳ್ಳಿ ರಾಮಕೃಷ್ಣ, ಕೆಂಗಲ್‌ಗೌಡ, ನಂಜುಂಡಸ್ವಾಮಿ ಇದ್ದರು.