ಶಿಕ್ಷಣಕ್ಕೆ ಹೆಚ್ಚಿನ ಅನುದಾನ ಮೀಸಲಿರಿಸಿ: ಎಬಿವಿಪಿ ವಿಭಾಗ ಸಂಚಾಲಕ ಗಿರೀಶ್ ಬೇಡಿಕೆ

GIRISH ABVP- press meet (1)
Published on

ಹಾಸನ: ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಎಬಿವಿಪಿ ಕರ್ನಾಟಕ ದಕ್ಷಿಣ 44ನೇ ಪ್ರಾಂತ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ ಎಂದು ಎಬಿವಿಪಿ ವಿಭಾಗ ಸಂಚಾಲಕ ಗಿರೀಶ್ ಹೇಳಿದರು.

ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಅಳುವ ಸರ್ಕಾರಗಳು ವಿಫಲವಾಗಿವೆ. ರಾಜ್ಯದಲ್ಲಿ ಶಿಕ್ಷಣ ಎಂಬುದು ವ್ಯಾಪಾರ ಆಗುತ್ತಿದೆ. ಇದರಿಂದಾಗಿ ವಿದ್ಯಾರ್ಥಿಗಳು ನಿರಂತರ ತೊಂದರೆಗೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡುತ್ತಿಲ್ಲ. ಈ ರೀತಿಯ ನಿರ್ಲಕ್ಷೃ ವಹಿಸಿದರೆ ಶಿಕ್ಷಣ ವ್ಯವಸ್ಥೆ ಅಭಿವೃದ್ಧಿಗೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಸರಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಅನುದಾನವನ್ನು ಹೆಚ್ಚಿಸಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ರಾಜ್ಯದಲ್ಲಿ ಶಿಕ್ಷಣಕ್ಕೆ ಮೂಲಭೂತ ಸೌಕರ್ಯಗಳನ್ನು ನೀಡುವುದಕ್ಕೆ ಸರ್ಕಾರ ಹೆಚ್ಚು ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕು. ಇದರಿಂದ ಗ್ರಾಮೀಣ ಭಾಗದ ಹೆಣ್ಣುಮಕ್ಕಳಿಗೆ, ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಅನುಕೂಲವಾಗುತ್ತದೆ. ರಾಜ್ಯ ಸರ್ಕಾರ ಸರ್ಕಾರಿ ಶಾಲಾ-ಕಾಲೇಜುಗಳನ್ನು ಹೆಚ್ಚಿಸಿ ಉನ್ನತವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಎಲ್ಲ್ಲ ಪದವಿಪೂರ್ವ ಕಾಲೇಜುಗಳಲ್ಲಿ ವಿಜ್ಞಾನದ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಿಇಟಿ ಮತ್ತು ನೀಟ್ ತರಬೇತಿ ನೀಡಬೇಕು ಹಾಗೂ ಜಿಲ್ಲೆಗೊಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಬೇಕು. ಜತೆಗೆ ವಿದ್ಯಾರ್ಥಿಗಳಿಗೆ ಕೌಶಲವುಳ್ಳ ಶಿಕ್ಷಣವನ್ನು ಒದಗಿಸಬೇಕು ಹಾಗೂ ರಾಜ್ಯ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಮೂಲಕ ಸರ್ಕಾರಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.

ಪ್ರತಿ ವರ್ಷ ಮೂರು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವಸತಿ ನಿಲಯಕ್ಕೆ ಅರ್ಜಿ ಹಾಕಿದರೆ ಅದರಲ್ಲಿ ಶೇಕಡ 40 ವಿದ್ಯಾರ್ಥಿಗಳಿಗೆ ಮಾತ್ರ ಹಾಸ್ಟೆಲ್ ಸಿಗುತ್ತದೆ. ಹಾಗಾಗಿ ಹಾಸ್ಟೆಲ್ ಸಂಖ್ಯೆಗಳನ್ನು ಹೆಚ್ಚಳ ಮಾಡಿ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸಿಗುವಂತೆ ಮಾಡಬೇಕು. ಮತ್ತು ಈಗಿರುವ ಹಾಸ್ಟೆಲ್‌ಗಳಲ್ಲಿ ಸರಿಯಾದ ಮೂಲಭೂತ ಸೌಕರ್ಯಗಳು ಒದಗಿಸಬೇಕು. ರಾಜ್ಯದಲ್ಲಿ ಪ್ರಾರಂಭವಾಗುವ ಶೈಕ್ಷಣಿಕ ಸಾಲಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಎಲ್ಲ ಸಮುದಾಯದ ವಸತಿ ನಿಲಯಗಳಲ್ಲಿ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಬೇಕು ಎಂದರು.

ಕರ್ನಾಟಕದಲ್ಲಿ ಸ್ತ್ರೀ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಬಹಳ ತೊಂದರೆ ಆಗುತ್ತಿದೆ. ಹಾಗಾಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಹೆಚ್ಚುವರಿ ಬಸ್ಸುಗಳನ್ನು ಒದಗಿಸಬೇಕು. ಮತ್ತು ಈಗಾಗಲೇ ವಿದ್ಯಾರ್ಥಿನಿಯರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದ್ದು ವಿದ್ಯಾರ್ಥಿಗಳಿಗೂ ಕೂಡ ಉಚಿತವಾಗಿ ಬಸ್ ಪಾಸ್ ನೀಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಸಂಘಟನೆ ಮುಖಂಡರಾದ ಜ್ಞಾನಾ, ಜ್ಞಾನೇಶ್ವರಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net