

ಹಾಸನ: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದ ವಿದ್ಯಾರ್ಥಿಗಳು ಪದವಿ ಪಡೆಯುತ್ತಿದ್ದರೂ ಸಹ ಸಮಾಜದಲ್ಲಿ ಒಬ್ಬ ಉತ್ತಮ ಪ್ರಜೆಯಾಗಿ ಬದುಕಲು ಬೇಕಾದ ಸಂಸ್ಕಾರ, ವಿನಯವಂತಿಕೆ, ತಾಯಿ-ತಂದೆ, ಗುರುಗಳಿಗೆ ಗೌರವ ಕೊಡುವ ನಡವಳಿಕೆಗಳನ್ನು ಮರೆಯುತ್ತಿದ್ದಾರೆ ಎಂದು ಹಾಸನದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜೆ.ಕೆ. ದಾಕ್ಷಾಯಿಣಿ ಅವರು ಕಳವಳ ವ್ಯಕ್ತಪಡಿಸಿದರು.
ನಗರದ ಎಂ. ಕೃಷ್ಣ ಕಾನೂನು ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಬಿಳ್ಕೊಡುಗೆ ಮತ್ತು ಕಾಲೇಜು ವಾರ್ಷಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ವಕೀಲ ವೃತ್ತಿಯಲ್ಲಿ ಯಶಸ್ಸು ಪಡೆಯಲು ಬದ್ಧತೆ, ಧೈರ್ಯ, ನಿರಂತರ ಅಧ್ಯಯನಶೀಲತೆ ಅಗತ್ಯವಿದೆ. ಈ ಗುಣಗಳನ್ನು ವಿದ್ಯಾರ್ಥಿಗಳು ಕಾನೂನು ವ್ಯಾಸಂಗ ಮಾಡುವ ಅವಧಿಯಲ್ಲಿ ಬೆಳಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಆರ್.ಟಿ. ದ್ಯಾವೇಗೌಡ ಅವರು, ವಕೀಲ ವೃತ್ತಿಯು ಒಂದು ಶ್ರೇಷ್ಠ ವೃತ್ತಿಯಾಗಿದ್ದು, ವಕೀಲರು ಸಮಾಜದಲ್ಲಿ ಅನ್ಯಾಯಕ್ಕೆ ಒಳಗಾದವರಿಗೆ, ದುರ್ಬಲರಿಗೆ, ಶೋಷಿತರಿಗೆ ನ್ಯಾಯ ಒದಗಿಸುವ ಮನೋಭಾವನೆಯನ್ನು ಹೊಂದಿರಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಂ. ಕೃಷ್ಣ ಕಾನೂನು ಕಾಲೇಜಿನ ಉಪಾಧ್ಯಕ್ಷ ಚಂದ್ರಶೇಖರ್ ಅಯ್ಯರ್, ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ಎಸ್. ಶಿವರಾಮಕೃಷ್ಣಯ್ಯ, ಕಾಲೇಜಿನ ಪ್ರಾಂಶುಪಾಲ ಡಾ.ವಿ. ಶ್ರೀನಿವಾಸ್ ಮತ್ತು ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.