

ಚನ್ನರಾಯಪಟ್ಟಣ : ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳು ಶಿಕ್ಷಣಕ್ಕೆ ನೀಡುವಷ್ಟೆ ಆದ್ಯತೆಯನ್ನು ಕ್ರೀಡೆಗೂ ನೀಡಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ 2022-23 ನೇ ಸಾಲಿನ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಶಿಕ್ಷಣದ ಜತೆಗೆ ಕ್ರೀಡಾಭ್ಯಾಸ ಇದ್ದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬಹುದು ಎಂದರು.
ಶಿಕ್ಷಣ ಎಂದರೆ ಕೇವಲ ಅಂಕ ಗಳಿಸುವುದಷ್ಟೆ ಅಲ್ಲ. ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆ ಸೇರಿ ಸಮಗ್ರ ಕಲಿಕೆಗೆ ದಾರಿದೀಪವಾಗಲಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ದಿನದಲ್ಲಿ ಒಂದಷ್ಟು ಸಮಯವನ್ನು ವ್ಯಾಯಮಕ್ಕೆಂದೇ ಮೀಸಲಿಡಬೇಕು ಎಂದು ತಿಳಿಸಿದರು.
ದೈಹಿಕ ಹಾಗೂ ಮಾನಸಿಕವಾಗಿ ಸದೃಡವಾಗಿದ್ದಲ್ಲಿ ಮಾತ್ರ ಕ್ರೀಡೆಯಲ್ಲಿ ಸಾಧನೆ ಮಾಡಲು ಸಾಧ್ಯವಾಗಲಿದೆ. ನಿರಂತರ ಅಭ್ಯಾಸದೊಂದಿಗೆ ಕಠಿಣ ಪರಿಶ್ರಮ ವಹಿಸಿದ್ದಲ್ಲಿ ಯಾವುದೇ ಕ್ಷೇತ್ರದಲ್ಲಿಯಾದರೂ ಗುರಿ ತಲುಪಬಹುದು ಎಂದು ಕಿವಿಮಾತು ಹೇಳಿದರು.
ಮೈದಾನಗಳ ಅಭಿವೃದ್ಧಿ:
ಕ್ರೀಡಾಪಟುಗಳಿಗೆ ಪೂರಕವಾದ ಸುಸಜ್ಜಿತ ಮೈದಾನ ಅಗತ್ಯವಿದೆ. ಇದನ್ನು ಮನಗಂಡು ತಾಲೂಕಿನ ಎಲ್ಲ ಪ್ರೌಢಶಾಲೆಗಳ ಮೈದಾನಗಳನ್ನು ನರೇಗಾ ಯೋಜನೆಯಡಿ ತಲಾ 20 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ತಾಲೂಕು ಕ್ರೀಡಾಂಗಣವನ್ನು ನಗರಾಭಿವೃದ್ಧಿ ಇಲಾಖೆಯಡಿ ಅಭಿವೃದ್ಧಿ ಪಡಿಸಲಾಗಿದ್ದು ಸದ್ಯದಲ್ಲಿ 1.25 ಕೋಟಿ ರೂ. ವೆಚ್ಚದಲ್ಲಿ ಪುರುಷ ಹಾಗೂ ಮಹಿಳೆಯರ ಹೈಟೆಕ್ ಶೌಚಗೃಹ ನಿರ್ಮಾಣ, ಪೇಕ್ಷಕರ ಗ್ಯಾಲರಿ ಮತ್ತು ಮೈದಾನದ ಸುತ್ತ ನೆರಳಿನ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಉಪನ್ಯಾಸಕರ ಕೊರತೆ:
ಪದವಿ ಪೂರ್ವ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಮುಂದಾಗದಿರುವ ಕಾರಣ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ತೊಂದರೆಯುಂಟಾಗುತ್ತಿದೆ. ಈ ಬಗ್ಗೆ ಪ್ರತಿಬಾರಿ ಸದನದಲ್ಲಿ ಪ್ರಸ್ತಾಪಿಸಿದರೂ ಸರ್ಕಾರ ಗಣನೆಗೆ ತೆಗೆದುಕೊಂಡಿಲ್ಲ. ಪ್ರಯೋಗಾಲಯ ಕೊಠಡಿಗಳನ್ನು ನೀಡಿಲ್ಲ, ಶಿಕ್ಷಣ ಸಚಿವರ ಗಮನಕ್ಕೆ ತಂದರೂ ಉಪಯೋಗವಾಗಿಲ್ಲ. ವ್ಯವಸ್ಥೆ ಹೀಗಿದ್ದಾಗ ಖಾಸಗಿ ಕಾಲೇಜುಗಳಿಗೆ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಪೈಪೋಟಿ ನೀಡಲು ಹೇಗೆ ಸಾಧ್ಯವಾಗಲಿದೆ. ಇರುವುದರಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.
ಪುರಸಭಾ ಅಧ್ಯಕ್ಷೆ ರಾಧ ಮಂಜುನಾಥ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಎಂ.ಮಹಾಲಿಂಗಯ್ಯ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎ.ಎಸ್.ಜಯರಾಮ್, ರಾಜ್ಯ ಮಾರಾಟ ಮಹಾಮಂಡಳದ ನಿರ್ದೇಶಕ ಸಿ.ಎನ್.ಪುಟ್ಟಸ್ವಾಮಿಗೌಡ, ಎಚ್‌ಎಸ್‌ಎಸ್‌ಕೆ ಅಧ್ಯಕ್ಷ ಸಿ.ಎನ್.ವೆಂಕಟೇಶ್, ಪ್ರಾಂಶುಪಾಲ ಕೆ.ಟಿ.ರಾಮೇಗೌಡ ಹಾಗೂ ಇತರರು ಇದ್ದರು.