ಶಿಕ್ಷಣದಿಂದ ಭಿಕ್ಷಾಟನೆ ಸಂಪೂರ್ಣ ತಡೆ ಸಾಧ್ಯ

14 Chn 5
ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಕೋವಿಡ್‌ನಿಂದ ಪಾಲಕರನ್ನು ಕಳೆದುಕೊಂಡಿದ್ದ ವಿದ್ಯಾರ್ಥಿನಿಗೆ ಲ್ಯಾಪ್‌ಟಾಪ್‌ನ್ನು ವಿತರಿಸಿದರು. ಕೆ.ಎಂ.ಗಾಯತ್ರಿ, ಎಂ.ಶ್ರೀಧರ್ ಮತ್ತಿತರರಿದ್ದರು.
Published on

ಚಾಮರಾಜನಗರ: ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಉತ್ತಮ ಶಿಕ್ಷಣ ನೀಡಿದಾಗ ಮಾತ್ರ ಭಿಕ್ಷಾಟನೆಯನ್ನು ಸಂಪೂರ್ಣವಾಗಿ ತಡೆಗಟ್ಟಬಹುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಸ್ವಯಂ ಸೇವಾ ಸಂಸ್ಥೆಗಳು, ಪಿಎಂಎಸ್‌ಆರ್ ಸಂಸ್ಥೆ, ಜಿಲ್ಲಾ ಮತ್ತು ಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿ ಮಕ್ಕಳ ಭಿಕ್ಷಾಟನೆ ತಡೆ ಉಸ್ತುವಾರಿ ತಂಡದ ಸದಸ್ಯರಿಗೆ ಬುಧವಾರ ಆಯೋಜಿಸಿದ್ದ ಮಕ್ಕಳ ಭಿಕ್ಷಾಟನೆ ತಡೆಗಟ್ಟುವ ಕುರಿತು ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿಯೊಬ್ಬರೂ ಸಮಾಜಮುಖಿಯಾಗಿ ಬದುಕುವ ಅವಕಾಶ ಮಾಡಿಕೊಡಲು ಸರ್ಕಾರ ಮಕ್ಕಳಿಗೆ ಉಚಿತ ಶಿಕ್ಷಣ, ವಿದ್ಯಾರ್ಥಿನಿಲಯ ಇನ್ನಿತರ ಸೌಲಭ್ಯಗಳನ್ನು ನೀಡಿದೆ. ಪಾಲಕರನ್ನು ಕಳೆದುಕೊಂಡ ಮಕ್ಕಳು ಭಿಕ್ಷಾಟನೆಗೆ ಒಳಗಾಗಿರುತ್ತಾರೆ. ಅಂತಹ ಮಕ್ಕಳನ್ನು ಅಧಿಕಾರಿಗಳು, ಸರ್ಕಾರೇತರ ಸಂಸ್ಥೆಗಳು ರಕ್ಷಿಸಬೇಕು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಶ್ರೀಧರ್ ಮಾತನಾಡಿ, ಮಾನವ ಕಳ್ಳ ಸಾಗಣೆಯಲ್ಲಿ ಮಹಿಳೆಯರನ್ನು ಹಾಗೂ ಮಕ್ಕಳನ್ನು ಭಿಕ್ಷಾಟನೆಗೆ ತಳ್ಳಿ ಅವರ ಜೀವನವನ್ನೇ ನಾಶ ಮಾಡುತ್ತಿದ್ದಾರೆ. ಭಿಕ್ಷಾಟನೆ ನಿರ್ಮೂಲನೆಗೆ ಮಹಿಳೆಯರು ಮತ್ತು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು ಎಂದರು.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಕಾರ್ಯಾಗಾರವನ್ನು ಉದ್ಘಾಟಿಸಿ, ಕೋವಿಡ್‌ನಿಂದ ಪಾಲಕರನ್ನು ಕಳೆದುಕೊಂಡಿದ್ದ ವಿದ್ಯಾರ್ಥಿನಿಗೆ ಲ್ಯಾಪ್‌ಟಾಪ್ ವಿತರಿಸಿದರು.

ಡಿವೈಎಸ್ಪಿ ಪ್ರಿಯಾದರ್ಶಿನಿ ಸಾಣೆಕೊಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗೀತಾಲಕ್ಷ್ಮೀ, ಮಹಿಳಾ ಕಲ್ಯಾಣ ಸಮಿತಿ ಅಧ್ಯಕ್ಷೆ ಎನ್.ಎಂ.ಸರಸ್ವತಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರ್‌ರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net