ಕೊಳ್ಳೇಗಾಲ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ರಾಜ್ ಕುಮಾರ್ ರಸ್ತೆ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದೆ. ಶಾಸಕ ಎ.ಆರ್.ಕೃಷ್ಣ ಮೂರ್ತಿ ಅವರು ರಸ್ತೆ ಅಭಿವೃದ್ಧಿ ಪಡಿಸಲು ಕ್ರಮವಹಿಸಿದ್ದಾರೆ ಎಂದು ನಗರಸಭೆ ಅಧ್ಯಕ್ಷೆ ರೇಖಾ ರಮೇಶ್ ಹೇಳಿದರು.
ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ರಾಜ್ ಕುಮಾರ್ ರಸ್ತೆ ವಿಸ್ತರಣೆ ಮಾಡಬೇಕೆಂದು ವಿವಿಧ ಪ್ರಗತಿಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇವೆಲ್ಲವೂ ನಮಗೆ ನೈತಿಕ ಬೆಂಬಲ ನೀಡಿದಂತಾಗಿದೆ. ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ರಸ್ತೆ ವಿಸ್ತರಣೆ ವಿಚಾರವಾಗಿ ಬಹಳ ಆಸಕ್ತಿ ವಹಿಸಿದ್ದು ಸಾಮಾನ್ಯ ಸಭೆಗಳಲ್ಲಿ ಈ ಬಗ್ಗೆ ಅಧಿಕಾರಿಗಳಿಗೆ ಶೀಘ್ರದಲ್ಲೇ ಕ್ರಮವಹಿಸಲು ಸೂಚನೆ ನೀಡಿದ್ದಾರೆ. ಈಗಾಗಲೇ ರಸ್ತೆ ಖಾಸಗಿ ಎಜೆನ್ಸಿ ಅವರಿಗೆ ಸರ್ವೇ ನಡೆಸಲು ಸೂಚನೆ ನೀಡಲಾಗಿದೆ. ಲೋಕೋಪಯೋಗಿ ಸಚಿವರಿಗೂ ಅನುದಾನ ನೀಡುವಂತೆ ಶಾಸಕರು ಹಲವು ಬಾರಿ ಮನವಿ ಮಾಡಿದ್ದಾರೆ. ಶೀಘ್ರದಲ್ಲೇ ಕಾಮಗಾರಿ ನಡೆಯಲಿದೆ ಎಂದು ಭರವಸೆ ನೀಡಿದರು.