ಶೀಘ್ರದಲ್ಲೇ ರೈತರಿಗೆ ಪರಿಹಾರ ಧನ ವಿತರಣೆಗೆ ಕ್ರಮ

Published on

ಚಾಮರಾಜನಗರ : ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕೆ ಪ್ರದೇಶಕ್ಕೆ 2ನೇ ಹಂತದಲ್ಲಿ ಭೂ ಸ್ವಾಧೀನಪಡಿಸಿಕೊಂಡಿರುವ ರೈತರಿಗೆ ಶೀಘ್ರದಲ್ಲೇ ಪರಿಹಾರ ಧನ ವಿತರಣೆ ಮಾಡಲಾಗುವುದು ಎಂದು ರೇಷ್ಮೆ, ಪಶುಸಂಗೋಪನೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಭರವಸೆ ನೀಡಿದರು.

ತಾಲೂಕಿನ ಸಂತೇಮರಹಳ್ಳಿ ಪ್ರವಾಸಿ ಮಂದಿರದಲ್ಲಿ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರೊಂದಿಗೆ ಶನಿವಾರ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ಸಭೆಗೂ ಮೊದಲು ರೈತ ಸಂಘದ ಅಧ್ಯಕ್ಷ ಹೊನ್ನೂರು ಬಸವಣ್ಣ ಮಾತನಾಡಿ, ಜಿಲ್ಲೆಯ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಹಲವಾರು ಬಾರಿ ಜಿಲ್ಲಾಡಳಿತದ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲೆಯಲ್ಲಿ ಕಾನೂನು ಬಾಹಿರವಾಗಿ ಗೋಮಾಳಗಳನ್ನು ಗಣಿಗಾರಿಕೆಗೆ ನೀಡಲಾಗಿದೆ ಎಂದು ದೂರಿದರು.

ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಭೂಮಿ ನೀಡಿದ ರೈತರಿಗೆ ಪರಿಹಾರ ಧನವನ್ನು ವಿತರಿಸದೆ ಸಮಸ್ಯೆ ಅನುಭವಿಸುವಂತಾಗಿದೆ, ರೈತರ ಬೆಳೆಗಳಿಗೆ ಹಾನಿ ಮಾಡುತ್ತಿರುವ ಕ್ರಷರ್‌ಗಳನ್ನು ನಿಲ್ಲಿಸಬೇಕು. ಚಾಮರಾಜನಗರ ಹಾಲು ಒಕ್ಕೂಟದಲ್ಲಿ ರೈತರಿಂದ ಖರೀದಿಸುವ ಹಾಲಿನ ದರವನ್ನು ಕಡಿಮೆ ಮಾಡಲಾಗಿದ್ದು, ಇದನ್ನು ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಪ್ರತಿಕ್ರಿಯಿಸಿ, ಮಹದೇಶ್ವರಬೆಟ್ಟಕ್ಕೆ ಡಿ.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ. ಅಲ್ಲಿ ನಿಮ್ಮ ಸಮಸ್ಯೆಗಳನ್ನು ಚರ್ಚೆ ಮಾಡಲಾಗುವುದು. ಕೈಗಾರಿಕಾ ಪ್ರದೇಶಕ್ಕೆ ಭೂಮಿ ನೀಡಿದವರಿಗೆ ಶೀಘ್ರದಲ್ಲೇ ಪರಿಹಾರ ಧನ ವಿತರಣೆ ಮಾಡಲಾಗುವುದು ಎಂದು ಭರವಸೆ ನೀಡಿದರು. ಶಾಸಕ ಎ.ಆರ್.ಕೃಷ್ಣಮೂರ್ತಿ, ಗಣೇಶ್‌ಪ್ರಸಾದ್, ಜಿಲ್ಲಾಧಿಕಾರಿ ಶಿಲ್ಪಾನಾಗ್, ಎಸ್ಪಿ ಡಾ.ಬಿ.ಟಿ.ಕವಿತಾ, ರೈತ ಮುಖಂಡರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net