ಶೇ.78 ಪದವಿ ವಿದ್ಯಾರ್ಥಿಗಳಿಗೆ ಲಸಿಕೆ, ಗುರಿ ಸಾಧಿಸಲು ಚುರುಕಾಗಿ, ಜಿಲ್ಲಾಧಿಕಾರಿ ಲತಾ ಸೂಚನೆ

8CBP3
Published on

ಚಿಕ್ಕಬಳ್ಳಾಪುರ: ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳಿಗೆ ಕರೊನಾ ಲಸಿಕೆ ಹಾಕಿಸುವುದರಲ್ಲಿ ಶೇ.100 ರಷ್ಟು ಗುರಿ ಸಾಧಿಸಲು ಜಿಲ್ಲಾಧಿಕಾರಿ ಆರ್.ಲತಾ ಸೂಚಿಸಿದರು.

ಪದವಿ ವಿದ್ಯಾರ್ಥಿಗಳಿಗೆ ಲಸಿಕಾಕರಣ ಕುರಿತು ಗುರುವಾರ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರು ನೇತೃತ್ವದ ವಿಡಿಯೋ ಸಂವಾದ ಬಳಿಕ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಸಲಹೆ ನೀಡಿದರು.

ಜಿಲ್ಲೆಯಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ಶೇ.78 ವಿದ್ಯಾರ್ಥಿಗಳಿಗೆ ಈಗಾಗಲೇ ಲಸಿಕೆ ಹಾಕಲಾಗಿದೆ. ಉಳಿದಂತೆ ಒಂದೆರಡು ದಿನಗಳಲ್ಲಿ ಶೇ.100 ರಷ್ಟು ಗುರಿ ಸಾಧಿಸಬೇಕಿದ್ದು, ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಂಡು, ಚುರುಕಿನಿಂದ ಕಾರ್ಯ ನಿರ್ವಹಿಸುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದರು.

ಸರ್ಕಾರಿ ಮತ್ತು ಖಾಸಗಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳನ್ನು ಲಸಿಕಾ ಕೇಂದ್ರಗಳಿಗೆ ಕರೆಸಿಕೊಂಡು ಲಸಿಕೆ ಹಾಕಿಸಲು ಅಗತ್ಯ ವ್ಯವಸ್ಥೆ ಕೈಗೊಳ್ಳುವ ಮೂಲಕ ಲೋಪಗಳಿಗೆ ಅವಕಾಶ ನೀಡದಂತೆ ಎಚ್ಚರಿಸಿದ ಲತಾ, ಈಗಾಗಲೇ ಲಸಿಕೆ ಪಡೆದಿರುವ ಹಾಗೂ ಪಡೆಯಬೇಕಾಗಿರುವ ವಿದ್ಯಾರ್ಥಿಗಳು, ಕಾಲೇಜಿನಲ್ಲಿನ ಸಿದ್ಧತೆ ಸೇರಿ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲ ಕಾಲೇಜು ಮುಖ್ಯಸ್ಥರು ವರದಿ ನೀಡುವಂತೆ ನಿರ್ದೇಶನ ನೀಡಿದರು.

26,561 ವಿದ್ಯಾರ್ಥಿಗಳಿಗೆ ಲಸಿಕೆ: ಜಿಲ್ಲೆಯಲ್ಲಿ ಇಂಜಿನಿಯರಿಂಗ್, ಡಿಪ್ಲೋಮಾ, ಪಾಲಿಟೆಕ್ನಿಕ್, ಬಿ.ಇಡಿ ಕಾಲೇಜು ಸೇರಿ 57 ಪದವಿ ಕಾಲೇಜುಗಳಿವೆ. ಇದರಲ್ಲಿ ವ್ಯಾಸಂಗ ಮಾಡುತ್ತಿರುವ 26,561 ವಿದ್ಯಾರ್ಥಿಗಳಿಗೆ ಲಸಿಕೆ ಹಾಕುವ ಗುರಿ ನಿಗದಿಪಡಿಸಲಾಗಿದೆ. ಈ ಪೈಕಿ ಶೇ.78 ವಿದ್ಯಾರ್ಥಿಗಳಿಗೆ ಮೊದಲ ಡೋಸ್ ಲಸಿಕೆ ಹಾಕಿಸಲಾಗಿದೆ. ಲಸಿಕೆ ಪಡೆಯದಿರುವ ಶೇ.22 ವಿದ್ಯಾರ್ಥಿಗಳಿಗೆ ಲಸಿಕೆ ಹಾಕಲಾಗುತ್ತಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆರ್‌ಸಿಎಚ್ ಅಧಿಕಾರಿ ಚನ್ನಕೇಶವರೆಡ್ಡಿ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಲೀಡ್ ಕಾಲೇಜಿನ ಪ್ರಾಂಶುಪಾಲ ಎಲ್.ನಾಗರಾಜು ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net