

ಬೀದರ್: ಕರೊನಾದಿಂದ ನಿಧನರಾದ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ್ದರು ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಸ್ಮರಿಸಿದರು.
ಇಲ್ಲಿಯ ಶಹಾಪುರ ಗೇಟ್ ಬಳಿ ಇರುವ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿ, ಶಿಕ್ಷಣದಿಂದಲೇ ಯಾವುದೇ ಸಮಾಜದ ಅಭಿವೃದ್ಧಿ ಸಾಧ್ಯ ಎನ್ನುವುದನ್ನು ನಾರಾಯಣರಾವ್ ಅರಿತಿದ್ದರು. ಮಕ್ಕಳ ಶಿಕ್ಷಣಕ್ಕೆ ಒತ್ತು ಕೊಡಲು ಪಾಲಕರನ್ನು ಪ್ರೇರೇಪಿಸುತ್ತಿದ್ದರು ಎಂದು ಹೇಳಿದರು.
ಸಾವಿರಾರು ಅಭ್ಯರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲು ಒದಗಿಸಲು ನೆರವಾದ ಎಸ್ಟಿ ಗೊಂಡ ಪ್ರಮಾಣ ಪತ್ರಕ್ಕಾಗಿ ನಡೆದ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ವಸತಿ ನಿಲಯ ಆರಂಭಿಸಲು ಬೆಂಗಳೂರಿನಲ್ಲಿ ಧರಣಿ ನಡೆಸಿದ್ದರು ಎಂದು ತಿಳಿಸಿದರು.
ಶೈಕ್ಷಣಿಕ ಸಮಸ್ಯೆ ಹೊತ್ತು ಯಾರೇ ತಮ್ಮ ಬಳಿಗೆ ಬಂದರೂ ಸ್ಪಂದಿಸುತ್ತಿದ್ದರು. ಬಡ ವಿದ್ಯಾರ್ಥಿಗಳ ಕಾಲೇಜು ಪ್ರವೇಶಕ್ಕೆ ನೆರವು ಕಲ್ಪಿಸುತ್ತಿದ್ದರು. ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಸಭೆ, ಸಮಾರಂಭಗಳಲ್ಲಿ ಸಲಹೆ ನೀಡುತ್ತಿದ್ದರು. ಸಾಕ್ಷರತಾ ಮಿಷನ್ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಹಲವು ಕಾರ್ಯಕ್ರಮಗಳ ಮೂಲಕ ಜಿಲ್ಲೆಯಲ್ಲಿ ಸಾಕ್ಷರತಾ ಪ್ರಮಾಣ ಹೆಚ್ಚಿಸಲು ನಾರಾಯಣರಾವ್ ಪ್ರಯತ್ನಿಸಿದ್ದರು ಎಂದು ಹೇಳಿದರು.
ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಲು ಬೀದರ್ ನಿಂದ ಬೆಂಗಳೂರು ವರೆಗೆ ಸೈಕಲ್ ಜಾಥಾ ನಡೆಸಿದ್ದ ನಾರಾಯಣರಾವ್, ಬಡವರು, ಶೋಷಿತರು, ಹಿಂದುಳಿದ ವರ್ಗದವರು ಹಾಗೂ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗಾಗಿ ಅವಿರತ ಶ್ರಮ ವಹಿಸಿದ್ದರು ಎಂದರು.
ನಾರಾಯಣರಾವ್ ಸಾಮಾಜಿಕ ಕಳಕಳಿ ಹೊಂದಿದ್ದರು. ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸರಳ, ಸಜ್ಜನ ರಾಜಕಾರಣಿಯಾಗಿದ್ದರು. ಸ್ನೇಹ ಜೀವಿಯಾಗಿದ್ದರು. ಅವರ ನಿಧನದಿಂದ ಬೀದರ್ ಜಿಲ್ಲೆಗೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮ ಹಾಗೂ ಕುಟುಂಬ ವರ್ಗಕ್ಕೆ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.
ಪ್ರಾಚಾರ್ಯ ಖಾಜಾ ಪಟೇಲ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.