

ಚಾಮರಾಜನಗರ: ಕರ್ನಾಟಕ ರಾಜ್ಯೋತ್ಸವ ನಮ್ಮೆಲ್ಲರ ನಿತ್ಯೋತ್ಸವವಾಗಬೇಕು, ಕನ್ನಡ ನಾಡು-ನುಡಿಯ ಘನತೆಯನ್ನು ಎತ್ತಿ ಹಿಡಿಯುವುದು ನಮ್ಮ ಹಿರಿಮೆಯಾಗಬೇಕು ಎಂದು ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕರೆನೀಡಿದರು.
ನಗರದ ಜಿಲ್ಲಾ ಪೊಲೀಸ್ ಪೆರೇಡ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ವಿವಿಧ ತುಕಡಿಗಳಿಂದ ಗೌರವವಂದನೆ ಸ್ವೀಕರಿಸಿ ರಾಜ್ಯೋತ್ಸವದ ಸಂದೇಶ ನೀಡಿದರು.
ಕರ್ನಾಟಕ ರಾಜ್ಯೋತ್ಸವ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಪ್ರಗತಿಗೆ ಪೂರಕವಾಗಿದೆ. ಅದೊಂದು ಕನ್ನಡಿಗರ ಭಾವನೆ ಮತ್ತು ಬಾಂಧವ್ಯ ಎನಿಸಿಕೊಂಡಿದೆ. ಕನ್ನಡ ನಾಡಲ್ಲಿ ಜನಿಸಿರುವ ನಾವು ಎಲ್ಲೇ ಇದ್ದರೂ, ಕನ್ನಡ ನಾಡು-ನುಡಿಯ ಘನತೆಯನ್ನು ಎತ್ತಿ ಹಿಡಿಯುವುದು ನಮ್ಮ ಹಿರಿಮೆಯಾಗಿದೆ ಎಂದರು. ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವನ್ನು ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಕನ್ನಡ ಭಾಷೆ, ಸಾಹಿತ್ಯಕ್ಕೆ ಎರಡು ವರ್ಷಗಳ ಇತಿಹಾಸವಿದ್ದು, ವಿಶ್ವದಲ್ಲೇ ವಿಶೇಷ ಮನ್ನಣೆಗೆ ಪಾತ್ರವಾಗಿದೆ. ಕವಿಗಳು, ದಾಸಶ್ರೇಷ್ಠರು, ಬಸವಾದಿ ಶರಣರು ಕನ್ನಡ ನಾಡು ನುಡಿಯನ್ನು ಶ್ರೀಮಂತಗೊಳಿಸಿದ್ದಾರೆ ಎಂದು ಹೇಳಿದರು.
ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ, ಪರಂಪರೆ, ಜಾನಪದ, ವೈದ್ಯಕೀಯ, ವಿಜ್ಞಾನ ಹಾಗೂ ಇನ್ನಿತರೆ ಕ್ಷೇತ್ರಗಳಲ್ಲಿ ಜಿಲ್ಲೆಯ ಕನ್ನಡಿಗರು ಸಾಕಷ್ಟು ಇದ್ದಾರೆ. ಕನ್ನಡ ಚಲನಚಿತ್ರದ ಮೇರು ನಟ ಡಾ.ರಾಜ್‌ಕುಮಾರ್ ಜಿಲ್ಲೆಯವರು ಎಂಬುದು ನಮ್ಮೆಲ್ಲರ ಹೆಮ್ಮೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಎಂಎಸ್‌ಐಎಲ್ ಅಧ್ಯಕ್ಷ ಮತ್ತು ಶಾಸಕ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್‌ಪ್ರಸಾದ್, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ, ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯಿತಿ ಸಿಇಓ ಪಿ.ಲಕ್ಷ್ಮೀ ಹಾಗೂ ಇತರರು ಉಪಸ್ಥಿತರಿದ್ದರು.