ಸಂವಿಧಾನ ಜಾಗೃತಿಗಾಗಿ ಜಾಥಾ

18Manju9-web
ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಡಿಸಿ ನಿತೇಶ ಪಾಟೀಲ ಮಾತನಾಡಿದರು. ರಾಹುಲ ಶಿಂಧೆ ಇದ್ದರು.
Published on

ಬೆಳಗಾವಿ: ಸಂವಿಧಾನದ ಮೌಲ್ಯಗಳು ಮತ್ತು ಆಶಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಗಣರಾಜ್ಯೋತ್ಸವ ದಿನ(ಜ.26ರಂದು) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಲಿದ್ದಾರೆ ಎಂದರು.

ಜಾಗೃತಿ ಜಾಥಾದ ಸ್ತಬ್ಧಚಿತ್ರವು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಮತ್ತು ಇತರ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಮೂಲಕ ಸಂವಿಧಾನದ ಮೌಲ್ಯಗಳು ಮತ್ತು ಆಶಯಗಳ ಕುರಿತು ಅರಿವು ಮೂಡಿಸಲಿದೆ. ಹೀಗೆ ಜಿಲ್ಲೆಯಾದ್ಯಂತ ಸಂಚರಿಸಲಿರುವ ಸ್ತಬ್ಧಚಿತ್ರವು ಫೆ.25ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಂವಿಧಾನ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಲಿದೆ ಎಂದರು.

ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಸಂವಿಧಾನ ಜಾಗೃತಿ ಜಾಥಾವು ಮಹತ್ವಾಕಾಂಕ್ಷಿ ಕಾರ್ಯಕ್ರಮ ಆಗಿದ್ದರಿಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಜತೆ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಲಕ್ಷ್ಮಣ ಬಬಲಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ ಕಲಾದಗಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವೆ ರಾಜಶ್ರೀ ಜೈನಾಪುರ, ವಾರ್ತಾ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಬಸವರಾಜ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net