

ಹಾಸನ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ವಜಾ ಮಾಡಿರುವ ನಡೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಬುಧವಾರ ಡಿಸಿ ಕಚೇರಿ ಎದುರಿನ ಅಂಬೇಡ್ಕರ್ ಭವನದ ಎದುರು ಮೌನ ಪ್ರತಿಭಟನೆ ನಡೆಸಿದರು. ನೂರಾರು ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿ ಮಹಾತ್ಮ ಗಾಂಧೀಜಿ ಹಾಗೂ ರಾಹುಲ್ ಗಾಂಧಿ ಅವರ ಭಾವಚಿತ್ರ ಹಿಡಿದು ಧರಣಿ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಈ.ಎಚ್.ಲಕ್ಷ್ಮಣ್ ಮಾತನಾಡಿ, ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಿರ್ದೇಶನದಂತೆ ಬುಧವಾರ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದಲೇ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ. ಇದನ್ನು ಖಂಡಿಸಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಅಂಬೇಡ್ಕರ್ ಪ್ರತಿಮೆ ಎದುರು ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರೊಂದಿಗೆ ಮೌನ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ದೇಶದ ವಿವಿಧ ರಾಜ್ಯಗಳಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸುತ್ತಿದೆ. ಕರ್ನಾಟಕದಲ್ಲಿ ಕೂಡ ಸೋಲು ಅನುಭವಿಸಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ವಿವಿಧೆಡೆ ಸೋತಿರುವ ಬಿಜೆಪಿಗರು ಕಾಂಗ್ರೆಸ್ ನಾಯಕರ ಮೇಲೆ ಗದಾಪ್ರಹಾರ ಮಾಡಲು ಮುಂದಾಗಿದ್ದಾರೆ. ಆದರೆ ಇಡೀ ದೇಶದ ಕಾಂಗ್ರೆಸ್ ಕಾರ್ಯಕರ್ತರು ರಾಹುಲ್ ಗಾಂಧಿ ಅವರ ಪರ ಇದ್ದೇವೆ. ಅವರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಬಿಜೆಪಿಯವರ ಈ ನಡೆಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜನ ತಕ್ಕ ಉತ್ತರ ನೀಡಲಿದ್ದಾರೆ ಎಂದರು.
ಈ ವೇಳೆ ರಾಜ್ಯಸಭೆ ಮಾಜಿ ಸದಸ್ಯ ಎಚ್.ಕೆ. ಜವರೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ, ಮುಖಂಡರಾದ ಶ್ರೇಯಸ್ ಪಟೇಲ್, ದೇವರಾಜೇಗೌಡ, ರಂಜಿತ್ ಗೊರೂರು, ತಾರಾ ಚಂದನ್ ಮೊದಲಾದವರು ಭಾಗವಹಿಸಿದ್ದರು.