ಸಂಸ್ಕಾರಯುತ ಶಿಕ್ಷಣಕ್ಕೆ ಆದ್ಯತೆ

13blk2
 ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಂಗಮೇಶ್ವರ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು, ಸಂಸದ ಸಾಗರ ಖಂಡ್ರೆ, ಶಶಿಧರ ಕೋಸಂಬೆ, ಧನರಾಜ ಬಂಬುಳಗೆ, ಬಸವರಾಜ ಮೊಳಕೀರೆ ಇತರರಿದ್ದರು.
Published on

ಭಾಲ್ಕಿ: ಗಡಿಭಾಗದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ನ ವತಿಯಿಂದ ಗುಣಾತ್ಮಕ ಶಿಕ್ಷಣ ಮತ್ತು ಉತ್ತಮ ಸಂಸ್ಕಾರ ಕಲಿಸಿಕೊಡುವ ಕೆಲಸ ಆಗುತ್ತಿರುವುದು ಸಂತಸ ತರಿಸಿದೆ ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.

ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಸಂಗಮೇಶ್ವರ ಕಾಲೇಜಿನ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಅವರು, ಇಂದಿನ ಆಧುನಿಕ ಯುಗದಲ್ಲಿ ಎಲ್ಲೆಡೆ ಅಂಕ ಗಳಿಕೆ ಶಿಕ್ಷಣಕ್ಕೆ ಮಾತ್ರ ಒತ್ತು ನೀಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಬದುಕಿನ ಮೌಲ್ಯದ ತಿಳುವಳಿಕೆ ಕೊರತೆ ಎದುರಾಗುತ್ತಿದೆ. ಆದರೆ, ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಗಡಿಭಾಗದ ಮಕ್ಕಳನ್ನು ಆದರ್ಶ ನಾಗರಿಕರನ್ನಾಗಿ ರೂಪಿಸುವ ಉದ್ದೇಶದಿಂದ ತೆರೆದ ಶಿಕ್ಷಣ ಸಂಸ್ಥೆ ಗುಣಾತ್ಮಕ, ಸಂಸ್ಕಾರಯುತ ಶಿಕ್ಷಣಕ್ಕೆ ಹೆಸರುವಾಸಿಯಾಗಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಕೆ ಜತೆಗೆ ಉತ್ತಮ ಸಂಸ್ಕಾರದೊಂದಿಗೆ ಹೊರಬರುತ್ತಿರುವುದು ಹೆಮ್ಮೆಯ ಸಂಗತಿ. ಮುಂದಿನ ದಿನಗಳಲ್ಲಿ ಮತ್ತಷ್ಟು ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟç ಮಟ್ಟದಲ್ಲಿ ಶೈಕ್ಷಣಿಕವಾಗಿ ಸಾಧನೆ ತೋರಲಿ ಎಂದು ಆಶಿಸಿದರು.

ಸಾನ್ನಿಧ್ಯ ವಹಿಸಿದ್ದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಮಾತನಾಡಿ, ಪಟ್ಟಣದ ಸಂಗಮೇಶ್ವರ ಕಾಲೇಜು ಆರಂಭಗೊಂಡ ಎರಡ್ಮೂರು ವರ್ಷಗಳಲ್ಲೇ ಕಲಾ ಮತ್ತು ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿಗಳು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿರುವುದು ಖುಷಿ ತಂದು ಕೊಟ್ಟಿದೆ ಎಂದು ತಿಳಿಸಿದರು.

ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ವಸತಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯ ಬಸವರಾಜ ಮೊಳಕೀರೆ ಪ್ರಾಸ್ತಾವಿಕ ಮಾತನಾಡಿದರು. ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ನ ನಿರ್ದೇಶಕ ಶಶಿಧರ ಕೋಸಂಬೆ, ಸಂಗಮೇಶ್ವರ ಶಿಕ್ಷಣ ಸಂಸ್ಥೆ ಸ್ಥಾನಿಕ ಕಮಿಟಿ ಅಧ್ಯಕ್ಷ ಧನರಾಜ ಬಂಬುಳಗೆ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶಂಭುಲಿಂಗ ಕಾಮಣ್ಣ, ರೈತ ಮುಖಂಡ ನಾಗಶೆಟೆಪ್ಪ ಲಂಜವಾಡೆ, ಸಂಗಮೇಶ ಜವಾದೆ, ಕಾಶಿನಾಥ ಭೂರೆ, ಪ್ರಾಚಾರ್ಯ ಪ್ರವೀಣ ಹಿರೇಮಠ, ವ್ಯವಸ್ಥಾಪಕ ವಿವೇಕ ಜೋಶಿ, ಸ್ನೇಹಲತಾ ಪಾಟೀಲ್, ನಾಗಾರಾಣಿ ಇತರರಿದ್ದರು.

ಸಂಗಮೇಶ್ವರ ಪಿಯುಸಿ ಕಾಲೇಜಿನಲ್ಲಿ ಕಲಾ ಮತ್ತು ವಿಜ್ಞಾನ ವಿಭಾಗದಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಪ್ರಸ್ತುತ ವರ್ಷ ದ್ವಿತೀಯ ಪಿಯುಸಿಯಲ್ಲಿ ಈ ಕಾಲೇಜಿನ ೧೦ ವಿದ್ಯಾರ್ಥಿಗಳು ಅಗ್ರಶ್ರೇಣಿ, ೫೦ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಪಾಸಾಗಿ ಕಾಲೇಜಿಗೆ ಉತ್ತಮ ಫಲಿತಾಂಶ ತಂದು ಕೊಟ್ಟಿದ್ದಾರೆ.

| ಶ್ರೀ ಗುರುಬಸವ ಪಟ್ಟದ್ದೇವರು

ಹಿರೇಮಠ ಸಂಸ್ಥಾನ ಭಾಲ್ಕಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net