ಸಂಸ್ಕಾರವಂತ ವಿದ್ಯಾಸಾಧನೆಯಿಂದ ಯಶಸ್ಸು

21
Published on

ಮೈಸೂರು: ವಿದ್ಯಾರ್ಥಿಗಳು ಜ್ಞಾನದ ಬೆಳಕಿನಲ್ಲಿ ಸುಸಂಸ್ಕೃತರಾಗಿ ಮುನ್ನಡೆಯಬೇಕು ಎಂದು ನಿವೃತ್ತ ಪ್ರಾಧ್ಯಾಪಕಿ ಡಾ.ಎಚ್.ಟಿ. ಶೈಲಜಾ ಹೇಳಿದರು.
ಜೆ.ಪಿ.ನಗರದ ಜೆಎಸ್‌ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಆಯೋಜಿಸಿದ್ದ 2023-24 ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.


ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ಮನಸ್ಸನನ್ನು ಉಲ್ಲಾಸಿಗೊಳಿಸುತ್ತವೆ. ಯಾವುದೇ ವ್ಯಕ್ತಿಯು ಸಂಸ್ಕಾರವಂತ ವಿದ್ಯಾಸಾಧನೆಯಿಂದ ಮಾತ್ರ ಯಶಸ್ವಿ ವ್ಯಕ್ತಿಯಾಗಲು ಸಾಧ್ಯ ಎಂದರು.


ಜೆಎಸ್‌ಎಸ್ ಮಹಾವಿದ್ಯಾಪೀಠದ ಪ್ರಕಟಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಮಾತನಾಡಿ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ತರ ಪಾತ್ರ ವಹಿಸುತ್ತವೆ. ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳು ಸರ್ವತೋಮುಖವಾಗಿ ಬೆಳವಣಿಗೆ ಹೊಂದಲು ಸಾಧ್ಯ. ವಿದ್ಯಾರ್ಥಿ ಜೀವನದಲ್ಲಿ ಮನೆ, ಶಾಲೆ ಮತ್ತು ಸಮಾಜ ಪ್ರಮುಖವಾದ ಪಾತ್ರ ನಿರ್ವಹಿಸುತ್ತವೆ ಎಂದರು


ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಬಿ.ಸದಾಶಿವಭಟ್ ಮಾತನಾಡಿ, ಕ್ರೀಡಾ ಚಟುವಟಿಕೆಗಳು ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿರುತ್ತವೆ. ಯೋಗ ಮತ್ತು ಇನ್ನಿತರ ಕ್ರೀಡಾ ಚಟುವಟಿಕೆಗಳು ಮನಸ್ಸಿನ ಏಕಾಗ್ರತೆ, ಓದಿನೆಡೆಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಸಹಾಯ ಮಾಡುತ್ತವೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಮೊಬೈಲ್ ಮತ್ತು ಇನ್ನಿತರ ಚಟುವಟಿಕೆಗಳ ಕಡೆಗೆ ಆಕರ್ಷಕರಾಗದೆ ತಮ್ಮ ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.


ಪ್ರಾಂಶುಪಾಲ ಎಚ್.ಎನ್.ನಿರಂಜನ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸರ್ವಾಂಗೀಣವಾಗಿ ಬೆಳವಣಿಗೆ ಹೊಂದಬೇಕು ಎಂದು ಕರೆಕೊಟ್ಟರು.
ವಿದ್ಯಾರ್ಥಿ ಸಂಜಯ್‌ಕುಮಾರ್, ವಿದ್ಯಾರ್ಥಿನಿ ಮಹೇಶ್ವರಿ ಹಾಗೂ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಬಿಂದುಶ್ರೀ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net