

ಹಗರಿಬೊಮ್ಮನಹಳ್ಳಿ: ತಾಲೂಕಿನ ರೈತರ ಹಲವಾರು ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಬೇಕು. ಸಕ್ಕರೆ ಕಾರ್ಖಾನೆ ಆರಂಭಿಸಲು ಪರವಾನಗಿ ನೀಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಾಸುದೇವ ಮೇಟಿ ಬಣದಿಂದ ಪಟ್ಟಣದಲ್ಲಿ ಕೆಲಕಾಲ ಸಂಚಾರ ತಡೆದು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧ್ಯಕ್ಷ ಸಿ.ಎ.ಗಾಳೆಪ್ಪ ಮಾತನಾಡಿ, ಎಪಿಎಂಸಿ ಕಾಯ್ದೆಯಲ್ಲಿ ಬದಲಾವಣೆ ಮಾಡಬಾರದು. ಸಾಗುವಳಿ ರೈತರಿಗೆ ಹಕ್ಕುಪತ್ರ ನೀಡಬೇಕು. ಪಶುಸಂಗೋಪನೆ ಮತ್ತು ಕೃಷಿ ಇಲಾಖೆಯಿಂದ ಬರುವ ಸಬ್ಸಿಡಿ ಸೌಲಭ್ಯ ರೈತರಿಗೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ರಾಮೇಶ್ವರ ಬಂಡಿ ಹೋಬಳಿ ಘಟಕದ ಕಾರ್ಯದರ್ಶಿ ಕೆ.ಕೊಟ್ರಯ್ಯ ಸ್ವಾಮಿ ಮಾತನಾಡಿ, ಅಕ್ರಮ-ಸಕ್ರಮ ಯೋಜನೆಯಡಿ ಅರ್ಜಿ ಹಾಕಿರುವ ರೈತರಿಗೆ ಪಟ್ಟಾ ನೀಡಬೇಕು. ಏತ ನೀರಾವರಿ ಯೋಜನೆಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು, ಕಬ್ಬು ಕಟಾವು ಸಂದರ್ಭದಲ್ಲಿ ಬೆಳೆಗಾರರ ಸಭೆ ಕರೆದು ಚರ್ಚಿಸಬೇಕು. ರೈತರಿಗೆ ಅನುಕೂಲವಾಗುವಂತೆ ಹಗಲು ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಬೇಕೆಂದು ಒತ್ತಾಯಿಸಿದರು.
ಉಪ ತಹಸೀಲ್ದಾರ್ ಶಿವಕುಮಾರಗೌಡಗೆ ಮನವಿ ಸಲ್ಲಿಸಲಾಯಿತು. ತಾಲೂಕು ಅಧ್ಯಕ್ಷ ಟಿ.ರಮೇಶ, ಕಾರ್ಯದರ್ಶಿ ಎಸ್.ಬಸವರಾಜ, ತಂಬ್ರಹಳ್ಳಿ ಹೋಬಳಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಕೆ.ದುರುಗಪ್ಪ, ಗಿರೀಶ, ಮೈಲಾರಪ್ಪ ಮತ್ತಿತರರು ಇದ್ದರು.