ಸಕ್ಕರೆ ಕಾರ್ಖಾನೆ ಮಾಲೀಕ ಶಾಸಕರಿಗೆ ಮಂತ್ರಿ ಸ್ಥಾನ ಬೇಡ: ಕುರುಬೂರು ಶಾಂತಕುಮಾರ್

dvg kuruburu shantakumar sep 16
Published on

ಮೈಸೂರು: ರೈತರಿಗೆ ಕಬ್ಬಿನ ಹಣ ಬಾಕಿ ಉಳಿಸಿಕೊಂಡಿರುವ ಸಕ್ಕರೆ ಕಾರ್ಖಾನೆಗಳ ಮಾಲೀಕರಾಗಿರುವ ಶಾಸಕರನ್ನು ನೂತನ ಸಚಿವ ಸಂಪುಟದಲ್ಲಿ ಸೇರ್ಪಡೆ ಮಾಡಿಕೊಳ್ಳಬಾರದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.
ಸಕ್ಕರೆ ಕಾರ್ಖಾನೆ ನಡೆಸುತ್ತಿರುವ ಮಾಲೀಕರು ರೈತರಿಗೆ ಇನ್ನಿಲ್ಲದ ಕಿರುಕುಳ ನೀಡುತ್ತಿದ್ದಾರೆ. ಬಾಕಿ ಹಣ ನೀಡುವಂತೆ ಎಷ್ಟು ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಸರ್ಕಾರ ಜಾರಿ ಮಾಡಿದ ಕಾನೂನು, ಆದೇಶವನ್ನು ಸಕ್ಕರೆ ಕಾರ್ಖಾನೆ ಮಾಲೀಕರು ಉಲ್ಲಂಘಿಸಿದ್ದಾರೆ. ನಮ್ಮ ಸಂಘಟನೆಯ ನಿರಂತರ ಒತ್ತಾಯದ ಮೇಲೆ ಪ್ರತಿ ಟನ್ ಕಬ್ಬಿಗೆ 150 ರೂ. ಎಫ್‌ಆರ್‌ಪಿ ದರ ನಿಗದಿಪಡಿಸಲು ಬೆಳಗಾವಿ ಅಧಿವೇಶನದಲ್ಲಿ ನಿರ್ಣಯಿಸಲಾಯಿತು. ಆದರೆ ಸರ್ಕಾರದ ಈ ಆದೇಶದ ವಿರುದ್ಧ ಕಾರ್ಖಾನೆ ಮಾಲೀಕರು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದಾರೆ. ಈ ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಕೋರಿದರು.
ರೈತ ವಿರೋಧಿ ನೀತಿಗಳಿಂದ ರೈತರ ಆಕ್ರೋಶಕ್ಕೆ ಗುರಿಯಾಗಿ ಬಿಜೆಪಿ ಅಧಿಕಾರ ಕಳೆದುಕೊಂಡಿತು. ನೂತನವಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಬೇಕು. ರೈತರ ಪ್ರಣಾಳಿಕೆಯಲ್ಲಿನ ಅಂಶಗಳನ್ನು ಜಾರಿಗೊಳಿಸಬೇಕು. ಕಾರ್ಖಾನೆ ಮಾಲೀಕರಾಗಿರುವ ಶಾಸಕರಿಗೆ ಸಚಿವ ಸ್ಥಾನ ನೀಡಬಾರದು ಎಂದು ಆಗ್ರಹಿಸಿದರು.
ಉಚಿತ ವಿದ್ಯುತ್, ಸಬ್ಸಿಡಿ ನಿಲ್ಲಿಸಲು ಯತ್ನ:
ಕೃಷಿ ಪಂಪ್‌ಸೆಟ್‌ಗಳಿಗೆ ರೈತರು ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯ ಮಾಡುವುದಕ್ಕೆ ವಿರೋಧವಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್, ಸಬ್ಸಿಡಿ ನಿಲ್ಲಿಸಲು ಕೇಂದ್ರ ಸರ್ಕಾರ ಯತ್ನಿಸಿದೆ. ಖಾಸಗೀಕರಣದ ಬಾಗಿಲು ತೆರೆದಿದ್ದು, ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್, ಸಬ್ಸಿಡಿ ಇಲ್ಲದೆ ರೈತರು ತೀವ್ರ ನಷ್ಟ ಅನುಭವಿಸುತ್ತಾರೆ. ಆದ್ದರಿಂದ ಯಾವುದೇ ಕಾರಣಕ್ಕೂ ಇದನ್ನು ಜಾರಿ ಮಾಡಬಾರದು ಎಂದು ಕುರುಬೂರು ಶಾಂತಕುಮಾರ್ ಮನವಿ ಮಾಡಿದರು.
ಹಿಂದಿನ ಸರ್ಕಾರ ಜಾರಿಗೊಳಿಸಿದ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಸೂದೆ, ಭೂ ಸುಧಾರಣೆ ಕಾಯ್ದೆ ರದ್ದು ಮಾಡಬೇಕು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಶಾಸನ ಜಾರಿ ಭರವಸೆ ಈಡೇರಿಸಲು ಕ್ರಮ ಕೈಗೊಳ್ಳಬೇಕು. ಚುನಾವಣಾ ಪೂರ್ವದಲ್ಲಿಯೂ ರೈತರ ಪ್ರಣಾಳಿಕೆ ಈಡೇರಿಸುವ ಕುರಿತು ರಾಜಕೀಯ ಪಕ್ಷಗಳ ಗಮನ ಸೆಳೆದಿದ್ದೇವೆ. ಈ ಬಗ್ಗೆ ನೂತನ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಲು ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿದ್ದೇವೆ ಎಂದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಮೈಸೂರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಕಮಲಮ್ಮ, ತಾಲೂಕು ಅಧ್ಯಕ್ಷ ಲಕ್ಷ್ಮೀಪುರ ವೆಂಕಟೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net