ಸದ್ಯಕ್ಕೆ ಕುಡಿಯುವ ನೀರಿಗೆ ತೊಂದರೆ ಇಲ್ಲ

DSC_3184 (1)
Published on

ಮೈಸೂರು: ಸದ್ಯಕ್ಕೆ ಮೈಸೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಬರುವುದು ಒಂದು ವಾರ ತಡವಾದರೂ ಸಮಸ್ಯೆಯಾಗುವುದಿಲ್ಲ. ಕಬಿನಿ, ಕೆ.ಆರ್.ಎಸ್ ಅಣೆಕಟ್ಟೆಯಲ್ಲಿ ಇನ್ನೂ ನೀರಿನ ಸಂಗ್ರಹ ಇದೆ. ಹೀಗಾಗಿ, ಸದ್ಯಕ್ಕೆ ಕುಡಿಯುವ ನೀರಿಗೆ ತೊಂದರೆ ಇಲ್ಲ. ಆದರೂ ಜನರು ನೀರನ್ನು ಮಿತವಾಗಿ ಬಳಸಬೇಕು ಎಂದು ತಿಳಿಸಿದರು.

ಸಕಾಲದಲ್ಲಿ ಮಳೆ ಬರದೆ, ಜಿಲ್ಲೆಯಲ್ಲಿ ಬರದ ಪರಿಸ್ಥಿತಿ ಬಂದರೆ ಎದುರಿಸಲು ಜಿಲ್ಲಾಡಳಿತ ಸಿದ್ಧವಿದೆ ಎಂದರು.

ಹವಾಮಾನ ಇಲಾಖೆ ಜೂ.7ರ ಬದಲು 9ರ ನಂತರ ಮಳೆಯಾಗುವುದಾಗಿ ಮಾಹಿತಿ ನೀಡಿದೆ. ವಾಯುಭಾರ ಕುಸಿತದಿಂದ ಮುಂಗಾರು ಮಾರುತಗಳ ಆಗಮನ ವಿಳಂಬವಾಗಿದೆ. ಮಳೆಯಾಗದಿದ್ದರೆ ಮುಂದಿನ ಕ್ರಮದ ಕುರಿತು ಯೋಚಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಏಪ್ರಿಲ್ ತಿಂಗಳಲ್ಲಿ ಸಾಮಾನ್ಯ ಮಳೆಯಾಗಿದೆ. ಮೇ ತಿಂಗಳಲ್ಲಿ ಆರಂಭದಲ್ಲಿ ವಾಡಿಕೆಯಷ್ಟು ಮಳೆಯಾಗಿ ಬಿತ್ತನೆ ಸಹ ಮಾಡಲಾಗಿದೆ. ಜೂನ್ ಮೊದಲ ವಾರ ಮಳೆಯಾಗಿದ್ದರೆ ಸಮಸ್ಯೆ ಇರುತ್ತಿರಲಿಲ್ಲ ಎಂದರು.

ಮುಂಗಾರಿನಲ್ಲಿ ಮಳೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಮುಂದಿನ ವಾರ ರೈತ ಮುಖಂಡರ ಸಭೆ ಕರೆಯಲಾಗಿದೆ. ಅವರೊಂದಿಗೆ ಚರ್ಚಿಸಿ ರೈತರ ಸಮಸ್ಯೆಗಳ ಪಟ್ಟಿ ಮಾಡಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net